ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಅಪ್ರಾಪ್ತ ಬಾಲಕ ಸಹಿತ ನಾಲ್ವರು ಆರೋಪಿಗಳ ಬಂಧನ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡದ ಸಿಬ್ಬಂದಿ ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದರು. ಪವನ್ ಕುಮಾರ್ನನ್ನು ನವೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

ಪ್ರಕರಣದ ಉಳಿದ ಆರೋಪಿಗಳಾದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು, ವೀರ ಸಾವರ್ಕರ್ ನಗರದ ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್ ಹಾಗೂ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಅಂಚೆಯ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ, ಪ್ರಕರಣದ ತನಿಖಾಧಿಕಾರಿಯಾಗಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.