ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ನ್ಯಾಯಾಲಯದ ಆದೇಶದ ಮೇರೆಗೆ ಜೈಲಿನಲ್ಲೇ ಫಿಸಿಯೋಥೆರಪಿ (Physiotherapy) ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರು ಜೈಲಿಗೆ ಭೇಟಿ ನೀಡಿ ದರ್ಶನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಜೈಲಾಧಿಕಾರಿಗಳು ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿದ್ದು, ಅದರಂತೆ ಚಿಕಿತ್ಸೆ ಆರಂಭಿಸಲಾಗಿದೆ. ಪ್ರತಿ ಎರಡು-ಮೂರು ದಿನಗಳಿಗೊಮ್ಮೆ ತಜ್ಞ ವೈದ್ಯರು ಜೈಲಿಗೆ ಭೇಟಿ ನೀಡಿ ಚಿಕಿತ್ಸೆ ನೀಡಲಿದ್ದಾರೆ.
ಬ್ಯಾರಕ್‌ನಲ್ಲೇ ಒಂದೂವರೆ ಗಂಟೆ ಚಿಕಿತ್ಸೆ
ಫಿಸಿಯೋಥೆರಪಿಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ವೈದ್ಯರು ಜೈಲಿಗೆ ತಂದು ಚಿಕಿತ್ಸೆ ನೀಡುತ್ತಿದ್ದಾರೆ. ದರ್ಶನ್ ಇರುವ ಬ್ಯಾರಕ್‌ನಲ್ಲೇ ಸುಮಾರು ಒಂದೂವರೆ ಗಂಟೆಗಳ ಕಾಲ ಚಿಕಿತ್ಸೆ ನೀಡಿ ವಾಪಸ್ ತೆರಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರಿಂದಲೇ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿತ್ತು. ಹಂತ ಹಂತವಾಗಿ ಚಿಕಿತ್ಸೆ ಪಡೆದ ಬಳಿಕ ಬೆನ್ನು ನೋವಿನ ಸಮಸ್ಯೆ ಕಡಿಮೆಯಾಗಿತ್ತು ಎನ್ನಲಾಗಿದೆ. ಇದೀಗ ಮತ್ತೆ ಫಿಸಿಯೋಥೆರಪಿ ಚಿಕಿತ್ಸೆ ಆರಂಭವಾಗಿದ್ದು, ಇದರಿಂದ ಬೆನ್ನು ನೋವಿನ ಸಮಸ್ಯೆಗೆ ಕೊಂಚ ಪರಿಹಾರ ದೊರೆಯುವ ನಿರೀಕ್ಷೆಯಿದೆ.















