ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಎಚ್.ಡಿ. ಕುಮಾರಸ್ವಾಮಿ

ಉಡುಪಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಉಡುಪಿಗೆ ಆಗಮಿಸಿದ ಅವರು, ಕಾಪು ಮಾರಿಗುಡಿಗೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ದಂಪತಿ ಜೊತೆಗಿದ್ದರು.

ದೇವಸ್ಥಾನದಲ್ಲಿ ಕುಟುಂಬದ ಸದಸ್ಯರೊಂದಿಗೆ ಗಂಟೆ ನಾದ ಸೇವೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಕ್ಷೇತ್ರದ ತಂತ್ರಿ ಕೆ.ಪಿ. ಕುಮಾರಗುರು ಅವರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಮೊಯ್ದೀನ್ ಬಾವ, ಕಾಪು ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.