ಉಡುಪಿ: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಇದೀಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿಯೂ ಡೆಂಗಿ ಹಾವಳಿ ಕಾಣಿಸಿಕೊಂಡಿದೆ. ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡೆಂಗಿ ಜ್ವರದಿಂದ ಬಳಲುತ್ತಿರುವುದು ಕಳವಳ ಮೂಡಿಸಿದೆ.
ಪೊಲೀಸ್ ಠಾಣೆಯಲ್ಲಿಯೇ ಹಲವರಿಗೆ ಡೆಂಗಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಉಡುಪಿ ನಗರಸಭೆಯು ಠಾಣೆಯ ಆವರಣದಲ್ಲಿ ಔಷಧಿ ಸಿಂಪಡಣೆ ಕಾರ್ಯಾಚರಣೆ ನಡೆಸಿದೆ. ನಗರಸಭೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ನಗರದ ಪ್ರಮುಖ ಪೊಲೀಸ್ ಠಾಣೆಯಲ್ಲಿಯೇ ಡೆಂಗಿ ಸೋಂಕು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿಯೂ ಆತಂಕಕ್ಕೆ ಕಾರಣವಾಗಿದೆ. ಡೆಂಗಿ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಹಾಗೂ ನಗರಸಭೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ.















