ಉಡುಪಿ: ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯೇ ಹೊಂಡಗುಂಡಿಗಳ ತಾಣ!

ಉಡುಪಿ: ಜಿಲ್ಲಾಡಳಿತದ ಕೇಂದ್ರ ಸ್ಥಾನವಾದ ಮಣಿಪಾಲದ ರಜತಾದ್ರಿ ಸಂಕೀರ್ಣದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯೇ ಒಂದೂವರೆ ವರ್ಷದಿಂದ ಹೊಂಡಗುಂಡಿಗಳಿಂದ ತುಂಬಿಕೊಂಡಿದ್ದು, ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಒಳಚರಂಡಿ ಕಾಮಗಾರಿಗಾಗಿ ಅಗೆದ ರಸ್ತೆಯನ್ನು ಮರುದುರಸ್ತಿ ಮಾಡದೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ವಾಹನ ಸವಾರರು ಧೂಳಿನಲ್ಲೇ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಸುಮಾರು ಒಂದೂವರೆ ವರ್ಷದ ಹಿಂದೆ ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿತ್ತು. ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಯನ್ನು ಯಥಾಸ್ಥಿತಿಗೆ ತರಬೇಕಿದ್ದ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸಾರ್ವಜನಿಕರು ದೂರಿದ್ದಾರೆ.

ಪರಿಣಾಮ ರಸ್ತೆ ಸಂಪೂರ್ಣ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಕಳೆದ ಐದಾರು ತಿಂಗಳಿಂದ ರಸ್ತೆಯಲ್ಲಿ ಸಿಮೆಂಟ್ ಮಿಶ್ರಿತ ಧೂಳು ವ್ಯಾಪಕವಾಗಿ ಹರಡುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ರಜತಾದ್ರಿ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿ ಕಚೇರಿ ಮಾತ್ರವಲ್ಲದೆ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳೂ ಕಾರ್ಯನಿರ್ವಹಿಸುತ್ತಿವೆ. ಸಮೀಪದಲ್ಲೇ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಕೂಡ ಇರುವುದರಿಂದ ಪ್ರತಿದಿನ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಸರ್ಕಾರಿ ಕೆಲಸಗಳಿಗಾಗಿ ಬರುವ ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ವಾಹನ ಸವಾರರು ಹೊಂಡಗುಂಡಿ ತಪ್ಪಿಸಿಕೊಂಡು ಸಾಗುವುದೇ ಸವಾಲಾಗಿದೆ.

ಅಧಿಕಾರಿಗಳ ಕಣ್ಣಿಗೆ ಕಾಣದ ಸಮಸ್ಯೆಯೇ?:

ರಸ್ತೆಯ ದುಸ್ಥಿತಿಯ ಬಗ್ಗೆ ಕಳೆದ ಒಂದೂವರೆ ವರ್ಷದಿಂದ ಆಟೋ ಚಾಲಕರು, ಸಮಾಜಸೇವಕರು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ರಸ್ತೆ ಅವ್ಯವಸ್ಥೆಯ ಚಿತ್ರಣಗಳನ್ನು ಹಂಚಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ನಡೆದಿದೆ. ಆದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂಬ ಆಕ್ರೋಶ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಜಿಲ್ಲಾಧಿಕಾರಿಯವರು ದಿನಕ್ಕೆ ಹಲವು ಬಾರಿ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಮಸ್ಯೆ ಪರಿಹಾರವಾಗದಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ಜಿಲ್ಲಾಡಳಿತದ ಕೇಂದ್ರ ಕಚೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಥಿತಿಯೇ ಹೀಗಾದರೆ, ನಗರದ ಇತರ ರಸ್ತೆಗಳ ಪರಿಸ್ಥಿತಿ ಹೇಗಿರಬಹುದು ಎಂಬ ಪ್ರಶ್ನೆಯೂ ಮೂಡಿದೆ.

ವಾರದ ಗಡುವು; ಇಲ್ಲದಿದ್ದರೆ ಪ್ರತಿಭಟನೆ:

ರಸ್ತೆಯ ದುಸ್ಥಿತಿಯನ್ನು ಖಂಡಿಸಿರುವ ಸಮಾಜಸೇವಕ ನಿತ್ಯಾನಂದ ಒಳಕಾಡು, ಒಂದು ವಾರದೊಳಗೆ ರಸ್ತೆಯ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ನಿಗದಿತ ಅವಧಿಯೊಳಗೆ ಕಾಮಗಾರಿ ಆರಂಭಿಸದಿದ್ದರೆ ವಿಶೇಷ ರೀತಿಯ ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆದು ಅಧಿಕಾರಿಗಳನ್ನು ಎಚ್ಚರಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಆಡಳಿತದ ಪ್ರಮುಖ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ದುರಸ್ತಿಗಾಗಿ ಕಾಯುತ್ತಿರುವುದು ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.