ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲು ಆಗ್ರಹ: ಬೆಂಗಳೂರಿನಿಂದ ಕಾರ್ಕಳಕ್ಕೆ ಬೃಹತ್ ವಾಹನ ರ‍್ಯಾಲಿ

ಉಡುಪಿ: ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಕಾರ್ಕಳದವರೆಗೆ ಬೃಹತ್ ವಾಹನ ರ‍್ಯಾಲಿ ನಡೆಯಿತು.

ಬೆಂಗಳೂರಿನ ಪರಶುರಾಮ ಥೀಮ್ ಪಾರ್ಕ್ ಜನಾಗ್ರಹ ಸಮಿತಿಯ ನೇತೃತ್ವದಲ್ಲಿ ಬೆಳಗ್ಗೆ ಆರಂಭವಾದ ರ‍್ಯಾಲಿಯಲ್ಲಿ ಐನೂರಕ್ಕೂ ಅಧಿಕ ವಾಹನಗಳಲ್ಲಿ ಕಾರ್ಯಕರ್ತರು ಕಾರ್ಕಳಕ್ಕೆ ಆಗಮಿಸಿದರು. ಬಳಿಕ ನಡೆದ ಜನಾಗ್ರಹ ಸಭೆಯನ್ನುದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾರ್ಕಳದ ಹೆಮ್ಮೆಯ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಕನಸಿನ ಯೋಜನೆಯಾದ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಲು ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜಕೀಯ ದ್ವೇಷದಿಂದ ಯೋಜನೆಯ ಅಭಿವೃದ್ಧಿಗೆ ತಡೆಯೊಡ್ಡಲಾಗುತ್ತಿದೆ ಎಂದು ದೂರಿದರು. ಪರಶುರಾಮರ ವಿಚಾರವಾಗಿ ಮಾತನಾಡಿದ ಕಾರಣಕ್ಕಾಗಿಯೇ ಉದಯ್ ಕುಮಾರ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪ್ರಶ್ನಿಸಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ನಿರೀಕ್ಷಿತ ಹಣ ಜಮೆಯಾಗಿಲ್ಲ ಎಂದು ಆರೋಪಿಸಿದರು. ಮರಳು ಹಾಗೂ ಕೆಂಪು ಕಲ್ಲಿನ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಾಣ ಕಷ್ಟವಾಗಿದೆ. ಈ ಸಮಸ್ಯೆಗಳ ಬಗ್ಗೆ ಉದಯ್ ಕುಮಾರ್ ಶೆಟ್ಟಿ ಸರ್ಕಾರದ ವಿರುದ್ಧ ಧ್ವನಿ ಎತ್ತಲಿ ಎಂದು ಸವಾಲು ಹಾಕಿದರು.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಇಂತಹ ಕೃತ್ಯಗಳನ್ನು ನಿಲ್ಲಿಸದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಕಾರ್ಕಳದ ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಆರೋಪಿಸಿದರು.

ಮೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಿ ಮರುವಿನ್ಯಾಸಗೊಳಿಸುವ ಉದ್ದೇಶದಿಂದ ಶಿಲ್ಪಿಗಳು 2023ರ ಸೆಪ್ಟೆಂಬರ್‌ನಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ ಅಕ್ಟೋಬರ್ 4ರಂದು ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿ, ತಹಶೀಲ್ದಾರ್ ಮೂಲಕ ಸಾರ್ವಜನಿಕ ಪ್ರಕಟಣೆಯನ್ನೂ ನೀಡಿದ್ದರು. ಆದರೆ, ಮರುವಿನ್ಯಾಸದ ಕೆಲಸ ಆರಂಭವಾದಾಗ ಮೂರ್ತಿ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ವದಂತಿ ಹರಡಿ ಪ್ರತಿಭಟನೆ ನಡೆಸಿದರು ಎಂದರು.

ಹಿತರಕ್ಷಣಾ ವೇದಿಕೆಯ ಹೆಸರಿನಲ್ಲಿ ದೂರು ಕೊಡಿಸುವುದು, ರಸ್ತೆಗೆ ಮಣ್ಣು ಹಾಕಿ ತಡೆಯೊಡ್ಡುವುದು ಹಾಗೂ ಪ್ರಕರಣ ದಾಖಲಿಸುವ ಮೂಲಕ ವಿವಾದವನ್ನು ರಾಜಕೀಯಗೊಳಿಸಲಾಗಿದೆ. ತನಿಖೆಯ ನೆಪದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರವಾಸೋದ್ಯಮ ಯೋಜನೆ ಸ್ಥಗಿತಗೊಂಡಿದೆ. ಇತರ ಹಗರಣಗಳ ತನಿಖೆಯನ್ನು ಕೆಲವೇ ತಿಂಗಳಲ್ಲಿ ಪೂರ್ಣಗೊಳಿಸುವ ಸರ್ಕಾರಕ್ಕೆ ಪರಶುರಾಮ ಮೂರ್ತಿಯ ಗುಣಮಟ್ಟ ಪರೀಕ್ಷಿಸಲು ನಾಲ್ಕು ವರ್ಷಗಳೇ ಬೇಕೇ ಎಂದು ಪ್ರಶ್ನಿಸಿದ ಅವರು, ಮೂರ್ತಿ ನಿರ್ಮಾಣಕ್ಕೆ ಮೀಸಲಿಟ್ಟ ಎರಡು ಕೋಟಿ ರೂಪಾಯಿಗಳಲ್ಲಿ ಇನ್ನೂ ಒಂದು ಕೋಟಿ ರೂಪಾಯಿ ಬಿಡುಗಡೆಯಾಗಿಲ್ಲ. ಹೀಗಿರುವಾಗ ಭ್ರಷ್ಟಾಚಾರದ ಆರೋಪ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾರ್ಕಳದಲ್ಲಿ ಬಾಹುಬಲಿ, ಕೋಟಿ-ಚೆನ್ನಯ್ಯ ಹಾಗೂ ಪರಶುರಾಮ ಥೀಮ್ ಪಾರ್ಕ್‌ಗಳ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತಮ ಅವಕಾಶವಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಮಹಾಮಸ್ತಕಾಭಿಷೇಕಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ಪರಶುರಾಮ ಥೀಮ್ ಪಾರ್ಕ್ ಅನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪಾಲ್ಗೊಂಡಿದ್ದರು. ಥೀಮ್ ಪಾರ್ಕ್‌ಗೆ ತೆರಳದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.