ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ ಎರಡನೇ ಬಾರಿಗೆ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಬಳಿಕ, ಸಿಆರ್‌ಪಿಸಿ 439ರ ಅಡಿಯಲ್ಲಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು (ನ.24) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಲಿದೆ.

ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅಲ್ಲಿಂದಲೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಕರಣದ ಪ್ರಮುಖ ಸಾಕ್ಷಿಗಳು ಈಗಾಗಲೇ ಪ್ರತಿಕೂಲ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೆ, ವಿಚಾರಣೆಯ ಸಂದರ್ಭದಲ್ಲಿ ತಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ. ಹೀಗಾಗಿ ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಸೆಪ್ಟೆಂಬರ್ 26ರಂದು 59ನೇ ಸಿಸಿಎಚ್ ನ್ಯಾಯಾಲಯ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ವಕೀಲ ನಾರಾಯಣಸ್ವಾಮಿ ಅವರ ಮೂಲಕ ಹೈಕೋರ್ಟ್‌ಗೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲಾಗಿದೆ.