ಉಡುಪಿ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನಿರ್ಮಿಸಲಾಗಿರುವ ‘ದೃಷ್ಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್’ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಹೊಸ ಬಲ ನೀಡಲಿದೆ.
ಜಿಲ್ಲೆಯ ಸಂಚಾರ ವ್ಯವಸ್ಥೆಯ ಮೇಲ್ವಿಚಾರಣೆ, ಸಂಚಾರ ನಿಯಮ ಉಲ್ಲಂಘನೆ ಪತ್ತೆ, ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕೇಂದ್ರ ಮಹತ್ವದ ಪಾತ್ರ ವಹಿಸಲಿದೆ.ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಪೊಲೀಸ್ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ದೃಷ್ಟಿ’ ಉತ್ತಮ ಯೋಜನೆಯಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಜಿಲ್ಲೆಯಾದ್ಯಂತ ವಿಸ್ತರಣೆ ಮಾಡಲಾಗುವುದು.
ಜಿಲ್ಲೆಯ ಪ್ರಮುಖ ಜಂಕ್ಷನ್ಗಳಲ್ಲಿ ಅತ್ಯುತ್ತಮ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಲಾಗುವುದು. ಇದರಿಂದ ಸಂಚಾರ ನಿಯಮ ಉಲ್ಲಂಘನೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗಲಿದೆ. ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೂ ಇದು ಸಹಕಾರಿಯಾಗಲಿದೆ. ಅಲ್ಲದೆ,ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವಾಗಲಿದೆ.
ಅತ್ಯುತ್ತಮ ತಂತ್ರಜ್ಞಾನವನ್ನು ಬಳಸಿಕೊಂಡು ನಿಯಂತ್ರಣ ಕೊಠಡಿಯನ್ನು ನಿರ್ಮಿಸಲಾಗಿದೆ’ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಒಂದೇ ಕೇಂದ್ರದಿಂದ ಸಂಚಾರ ವ್ಯವಸ್ಥೆ ಹಾಗೂ ಪ್ರಮುಖ ಪ್ರದೇಶಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸುವ ಈ ವ್ಯವಸ್ಥೆ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ರಿಜ್ವಾನ್ ಅರ್ಷದ್, ಉಸ್ತುವಾರಿ ಸಚಿವರು















