79ನೇ ವಸಂತಕ್ಕೆ ಕಾಲಿಟ್ಟ ಖಾವಂದರು, ವೀರೇಂದ್ರ ಹೆಗ್ಗಡೆಯವರಿಗೆ ಜನ್ಮ ದಿನದ ಸಂಭ್ರಮ; 59 ವರ್ಷದ ಸಾರ್ಥಕ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು 78 ವರ್ಷಗಳನ್ನು ಪೂರೈಸಿ 79ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅನ್ನದಾನ, ವಿದ್ಯಾದಾನ, ಆರೋಗ್ಯ ಸೇವೆ ಹಾಗೂ ಗ್ರಾಮೀಣಾಭಿವೃದ್ಧಿ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿರುವ ಅವರ ಜನ್ಮದಿನವನ್ನು ಕ್ಷೇತ್ರದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ನಾಡಿನ ಶ್ರೇಷ್ಠ ಧಾರ್ಮಿಕ ಹಾಗೂ ಸಮಾಜಸೇವಕರಲ್ಲಿ ಒಬ್ಬರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು (ನವೆಂಬರ್ 25) 78 ವರ್ಷಗಳನ್ನು ಪೂರೈಸಿ 79ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅವರ ಜನ್ಮದಿನದ ಸಂಭ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಜ್ಜಾಗಿದ್ದು, ನಾಡಿನಾದ್ಯಂತದ ಭಕ್ತರು, ಅಭಿಮಾನಿಗಳು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸಲಿದ್ದಾರೆ. 1948ರ ನವೆಂಬರ್ 25ರಂದು ಜನಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1968ರಲ್ಲಿ ತಮ್ಮ 20ನೇ ವಯಸ್ಸಿನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಸೇವೆ ಆರಂಭಿಸಿದರು. ಶತಮಾನಗಳಿಂದ ದಾನಧರ್ಮಗಳಿಗೆ ಹೆಸರುವಾಸಿಯಾಗಿರುವ ಧರ್ಮಸ್ಥಳದ ಪರಂಪರೆಯನ್ನು ಮುಂದುವರಿಸುವುದರ ಜೊತೆಗೆ ಅದಕ್ಕೆ ಹೊಸ ಆಯಾಮ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅನ್ನದಾನ, ವಿದ್ಯಾದಾನ, ಔಷಧದಾನ ಹಾಗೂ ಅಭಯದಾನದ ಮೂಲಕ ಸಮಾಜದ ವಿವಿಧ ವರ್ಗಗಳ ಜನರಿಗೆ ನೆರವಾಗಿರುವ ಅವರ ಸೇವೆ ಇಂದು ರಾಜ್ಯದ ಗಡಿ ದಾಟಿ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದೆ.

ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ 

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ನವೆಂಬರ್ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಶೇಷ ಸಂಭ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ನಾಡಿನ ವಿವಿಧ ಭಾಗಗಳಿಂದ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ನೌಕರರು, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಸ್ಥಳೀಯ ಹಾಗೂ ಹೊರಭಾಗದ ನಾಗರಿಕರು ಸೇರಿದಂತೆ ಅಪಾರ ಸಂಖ್ಯೆಯ ಜನರು ಧರ್ಮಸ್ಥಳಕ್ಕೆ ಆಗಮಿಸಿ ಗೌರವ ಮತ್ತು ಅಭಿನಂದನೆ ಸಲ್ಲಿಸಲಿದ್ದಾರೆ.