ಉಡುಪಿ, ಫೆ26: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.
ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದ ಅವರು, ನೀರಿನ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ತತ್ಪರರಾಗಿ ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್ ಸೆಂಟರ್ ತೆರಯುವಂತೆ ತಿಳಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ನದಿ ದಂಡೆಯಲ್ಲಿನ ರೈತರಿಗೆ ನದಿಯ ನೀರು ಬಳಸುವುದರ ಬದಲು ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಕುರಿತಂತೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಸಿ, ಅವರ ಮನವೊಲಿಸುವಂತೆ ತಿಳಿಸಿದರು.
ಬೇಸಿಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸುವ ಕುರಿತಂತೆ ಆಪ್ ಅಭಿವೃದ್ದಿಪಡಿಸಲಾಗಿದ್ದು, ಇದರ ಪ್ರಾಯೋಗಿಕ ಬಳಕೆಯ ಕುರಿತು ಎಲ್ಲಾ ತಹಸೀಲ್ದಾರ್ ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮಲೇರಿಯಾ ಮುಂತಾದ ರೋಗ ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಕಾರ್ಯದರ್ಶಿಗಳು, ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸದ ಕಟ್ಟಡ ಮಾಲೀಕರಿಗೆ ಹೆಚ್ಚಿನ ಪ್ರಮಾಣದ ದಂಡ ವಿಧಿಸುವಂತೆ ಹಾಗೂ ಈ ಬಗ್ಗೆ ನಗರಸಭೆಯ ಬೈಲಾದಲ್ಲಿ ಅಳವಡಿಸಿ, ನಗರ ಸಭೆಯ ಅಧಿಕಾರಿಗಳ ತಂಡ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಹಾಗೂ ಜಿಲ್ಲೆಯಲ್ಲಿ ಎಳನೀರು ಸಿಪ್ಪೆಯನ್ನು ಬಿಸಾಡುವ ಬದಲು ಅದನ್ನು ಮೌಲ್ಯವರ್ಧಿತ ಮಾಡುವ ಕುರಿತಂತೆ ತೋಟಗಾರಿಕಾ ಅಧಿಕಾರಿಗಳು ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಪರಿಶೀಲಿಸುವಂತೆ ಹಾಗೂ ಮೌಲ್ಯವರ್ಧನೆ ಮಾಡಲು ಮುಂದೆ ಬರುವ ಕೈಗಾರಿಕೋದ್ಯಮಿಗಳಿಗೆ ಅಗತ್ಯ ಸಹಾಯಧನ ಮತ್ತು ಕೈಗಾರಿಕೆ ಸ್ಥಾಪನೆಗೆ ಸ್ಥಳವನ್ನು ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.