ರಾಜ್ಯದಲ್ಲಿ ನಾಲ್ವರಿಗೆ ಕೊರೋನಾ ಸೋಂಕು, ಸರ್ಕಾರದಿಂದ ಸಕಲ ಮುನ್ನೆಚ್ಚರಿಕೆ ಕ್ರಮ: ಸಿ.ಎಂ

ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್‌ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ ಈ ಸೋಂಕು ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ ಎಂದರು

ಅಮೆರಿಕದಿಂದ ಬಂದ ಟೆಕ್ಕಿ, ಅವರ ಪತ್ನಿ, ಮಗು ಸೋಂಕಿತರು. ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ಖಚಿತ ಪಟ್ಟಿದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಎಂದು ತಿಳಿಸಿದರು.

ಮುನ್ನೆಚ್ಚರಿಕೆಯ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿಶುವಿಹಾರ, ಎಲ್‍ಕೆಜಿ, ಯುಕೆಜಿ ಶಾಲೆಗಳು, ಅಂಗನವಾಡಿಗಳಿಗೂ ರಜೆ ಘೋಷಿಸಲಾಗಿದೆ. ಪ್ರತಿ ದಿನ ವೈದ್ಯಕೀಯ ಶಿಕ್ಷಣ ಸಚಿವರು, ಆರೋಗ್ಯ ಸಚಿವರು ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡುಗಳನ್ನು ಸ್ಥಾಪಿಸಲಾಗಿದೆ. ಕರ್ನಾಟಕದಲ್ಲಿ ನ್ಯಾಷನಲ್ ಇನ್ಸ್‌ ಟಿಟ್ಯೂಟ್ ಆಫ್ ವೈರಾಲಜಿ ಬೆಂಗಳೂರು ಘಟಕ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ರಕ್ತ ಪರೀಕ್ಷೆಯ ಸೌಲಭ್ಯ ಕಲ್ಪಿಸಲಾಗಿದೆ. ಮೈಸೂರು, ಹಾಸನ ಹಾಗೂ ಶಿವಮೊಗ್ಗ ಮೆಡಿಕಲ್ ಕಾಲೇಜುಗಳ ಪ್ರಯೋಗಾಲಯಗಳಲ್ಲಿ ಸೋಂಕು ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ 700 ಹಾಸಿಗೆಗಳನ್ನು ಗುರುತಿಸಲಾಗಿದೆ. 600-700 ಜನರ ತಾತ್ಕಾಲಿಕ ಕ್ವಾರಂಟೈನ್ ಸೌಲಭ್ಯ ಕಲ್ಪಿಸಲಾಗಿದೆ ಎಂದು  ತಿಳಿಸಿದರು.