ಉಡುಪಿ:ಮರಳು ದಿಬ್ಬಗಳನ್ನು ತೆರವುಗೊಳಿಸಲು ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ದೊರೆತಿರುವುದು ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಈ ಪ್ರಕಿಯೆಯು ಹಲವಾರು ಎಡರು ತೊಡರುಗಳಿಂದ ಜಿಲ್ಲೆಯಾದ್ಯಂತ ಸ್ಥಗಿತಗೊಂಡಿದ್ದ ಮರಳುಗಾರಿಕೆ ಪುನಶ್ಚೇತನಕ್ಕೆ ವೇಗ ನೀಡಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಏಳು ಸದಸ್ಯರ ಸಮಿತಿ ಸಭೆಯಲ್ಲಿ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸುವರೆ ತಾತ್ಕಾಲಿಕ ಪರವಾನಿಗೆ ನೀಡಲು ತೀರ್ಮಾನ ಕೈಗೊಂಡಿರುವುದು ಉತ್ತಮ ಬೆಳವಣಿಗೆ. ಇದರ ಫಲವಾಗಿ ಸಾರ್ವಜನಿಕರಿಗೆ ಶೀಘ್ರವಾಗಿ ಮರಳು ಲಭ್ಯವಾಗುವ ಸಾಧ್ಯತೆಗಳಿದ್ದು, ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಛಲದಿಂದ ನಿರಂತರ ಹೋರಾಟಗಳ ಮೂಲಕ ಅಹರ್ನಿಶಿ ಶ್ರಮಿಸಿರುವ ಉಡುಪಿ ಶಾಸಕ ಕೆ.ರಘುಪತಿ ಭಟ್ ಪ್ರಯತ್ನ ಪ್ರಶಂಸನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಏಳು ಸದಸ್ಯರ ಮರಳು ಸಮಿತಿ ಸದಸ್ಯ ಗುರುಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.