ಕೊರೊನಾ ಭೀತಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿಗೊಳಿಸಿದ ಡಿಸಿ ಜಿ. ಜಗದೀಶ್

ಉಡುಪಿ: ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಇಂದಿನಿಂದ ಅನಿರ್ದಿಷ್ಟಾವಧಿವರೆಗೆ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಹಿಂದೆ, ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ, ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜಾತ್ರೆ, ಧಾರ್ಮಿಕ ಉತ್ಸವಗಳಲ್ಲಿ ಜನರು ಭಾಗವಹಿಸುವಂತಿಲ್ಲ. ಸಂತೆ, ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಬೀಚ್ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ದೇವಸ್ಥಾನಗಳಲ್ಲಿ ದೇವರ ದರ್ಶನ ಹೊರತುಪಡಿಸಿ ಯಾವುದೇ ಉತ್ಸವಗಳನ್ನು ನಡೆಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.