ಉಡುಪಿ: ರೋಗಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಹೋದ ಘಟನೆ ಇಂದು ಬೆಳಿಗ್ಗೆ 9.30ರ ಸುಮಾರಿಗೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಸಂಭವಿಸಿದೆ.
ಉಡುಪಿ ನಗರದ ಗರಡಿ ರಸ್ತೆಯ ವ್ಯಕ್ತಿಯೊಬ್ಬರು ತಮ್ಮ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರೋಗಿಯೊಬ್ಬರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕಾರಿನ ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಕಾರನ್ನು ರಸ್ತೆಯ ಬದಿ ನಿಲ್ಲಿಸಿ, ರೋಗಿಯನ್ನು ಹೊರಗಡೆ ಕರೆದುಕೊಂಡು ಬರುವಷ್ಟರಲ್ಲಿ ಬೆಂಕಿ ಸಂಪೂರ್ಣ ಕಾರನ್ನು ಆವರಿಸಿದೆ. ಬಳಿಕ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಅಂದಾಜು ಏಳು ಲಕ್ಷ ರೂ ನಷ್ಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.