ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14 ರಂದು ಸಂಜೆ ಮೃತಪಟ್ಟಿದ್ದ ಮುಂಬೈನಿಂದ ಬಂದಿದ್ದ ಕುಂದಾಪುರ ಮೂಲದ 54 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೋಹನ್ ಶೆಟ್ಟಿ ತಿಳಿಸಿದ್ದಾರೆ.
ಮುಂಬೈನಿಂದ ಕುಂದಾಪುರ ತಾಲ್ಲೂಕಿಗೆ ಬಂದಿರುವ ಈ ವ್ಯಕ್ತಿಗೆ ಮೇ 13ರಂದು ಹೃದಯಾಘಾತ ಸಂಭವಿಸಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೇ 14ರಂದು ಮೃತಪಟ್ಟಿದ್ದರು. ಆ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಐಸೋಲೇಷನ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲದೆ ವ್ಯಕ್ತಿಯ ಗಂಟಲಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಅದರಲ್ಲಿ ಕೊರೊನಾ ಪಾಸಿಟಿವ್ ಇರುವುದು ಖಚಿತಗೊಂಡಿದೆ ಎಂದು ಹೇಳಿದ್ದಾರೆ.
ವ್ಯಕ್ತಿ ಮಹಾರಾಷ್ಟ್ರದಿಂದ ಆಗಮಿಸಿದ್ದರಿಂದ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣದಿಂದ ಆತ ಆಸ್ಪತ್ರೆಗೆ ದಾಖಲಾದ ದಿನದಿಂದ ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿಕಿತ್ಸೆ ಕೊಡಲಾಗಿತ್ತು. ಅಲ್ಲದೆ, ಆ ವ್ಯಕ್ತಿಗೆ ಚಿಕಿತ್ಸೆ ನೀಡಿದ ತಂಡದಲ್ಲಿದ್ದ ಕೆಲವೊಂದು ವೈದ್ಯರು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನಿಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.