ಮಂಗಳೂರು: ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸೋಮವಾರ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ಸಾಮಾರ್ಥ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು.
ಬಿಪಿಎಲ್, ಎಪಿಎಲ್ ಕುಟುಂಬಗಳು, ವಲಸೆ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಚಿಕಿತ್ಸೆ ದೊರೆಯಲಿದೆ. ರೋಗಿಗಳು ಆಸ್ಪತ್ರೆಯಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಕೂಡ ಉಚಿತ ಚಿಕಿತ್ಸೆ ಮುಂದುವರಿಯಲಿದೆ. ದ.ಕ. ಜಿಲ್ಲೆಯಲ್ಲಿ ಕೊರೊನಾ ಗುಣಮುಖರಾದವರ ಸಂಖ್ಯೆ ಅಧಿಕವಾಗಿದ್ದು, ಪ್ರತೀದಿನ ಅಧಿಕ ಮಂದಿ ಬಿಡುಗಡೆ ಆಗುತ್ತಿದ್ದಾರೆ ಎಂದರು.
ಕೊರೊನಾಕ್ಕೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜನತೆಯ ಆರೋಗ್ಯ ರಕ್ಷಣೆಗೆ ಸರಕಾರ ಕಟಿಬದ್ಧವಾಗಿದೆ ಎಂದರು.
ಹೆಚ್ಚುವರಿ ಬಿಲ್ಗೆ ಕೇಸು; ನಳಿನ್ ಸೂಚನೆ
ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರ ನಿಗದಿಪಡಿಸಿದ ಚಿಕಿತ್ಸಾ ದರವನ್ನು ಮೀರಿ ಭಾರೀ ಮೊತ್ತದ ಬಿಲ್ಲನ್ನು ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದ್ದು, ಅಂತಹ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸುವಂತೆ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಚಿಕಿತ್ಸೆಗೆ ಸರಕಾರ ನಿಗದಿಪಡಿಸಿದ ದರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರೋಗಿಯ ತುರ್ತು ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಇದ್ದಲ್ಲಿ, ಕೋವಿಡ್ ವರದಿಗೆ ಕಾಯದೆ, ಶಸ್ತ್ರಚಿಕಿತ್ಸೆ ಮಾಡುವಂತೆ ಸಂಸದರು ಸೂಚಿಸಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸರಕಾರಿ ದರದಲ್ಲಿ ದೊರಕುವ ಕೋವಿಡ್ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೇ, ರೋಗಿಗಳ ಅಹವಾಲಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರತ್ನಾಕರ್, ವೆನ್ಲಾಕ್ ಅಧೀಕ್ಷಕ ಡಾ. ಸದಾಶಿವ, ಕೆಎಂಸಿ ಆಸ್ಪತ್ರೆ ಅಧಿಕಾರಿಗಳು ಉಪಸ್ಥಿತರಿದ್ದರು.