ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ. 68.73 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ. 54.77 ಬಾಲಕರು ಪಾಸ್ ಆಗಿದ್ದಾರೆ.
ಇಂದು ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದರು.
ಈ ಬಾರಿ ಹೊಸದಾಗಿ 5,56, 267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ. 69.20ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 91, 025 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಪೈಕಿ 25, 602 (ಶೇ. 46.56) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 27,985 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 6,748 (ಶೇ.24.1) ಪಾಸ್ ಆಗಿದ್ದಾರೆ. ಒಟ್ಟಾರೆ ಈ ಬಾರಿ ಶೇ. 61.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 61.73 ವಿದ್ಯಾರ್ಥಿಗಳು ಪಾಸ್ ಆಗಿದ್ದರು ಎಂದು ತಿಳಿಸಿದ್ದಾರೆ.
ಈ ಬಾರಿ ವಿಜ್ಞಾನ ವಿಭಾಗದಲ್ಲಿ ಶೇ. 76.02 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ. 65.52 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ. 41.27ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಉಡುಪಿ, ದಕ್ಷಿಣ ಕನ್ನಡ ಫಸ್ಟ್:
ಈ ಬಾರಿ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಶೇ. 90.71 ರಷ್ಟು ಫಲಿತಾಂಶ ಪಡೆದು ಜಂಟಿಯಾಗಿ ಪ್ರಥಮ ಸ್ಥಾನವನ್ನು ಹಂಚಿಕೊಂಡಿದೆ. ಉಳಿದಂತೆ ಕೊಡಗು ಜಿಲ್ಲೆ ಶೇ. 81.53ರಷ್ಟು ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ ಶೇ. 80.97 ಫಲಿತಾಂಶ ಪಡೆದು ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.












