ಉಡುಪಿ: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಈ ವೃತ್ತಿಯಲ್ಲಿ ಸಿಗುವ ಗೌರವ, ಪ್ರೀತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುದರಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಅವರು ಶನಿವಾರ ಉಡುಪಿಯ ಸೈಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಜಗತ್ತಿನ ಎಲ್ಲ ಆವಿಷ್ಕಾರ ಗಳಿಗೆ ಮೂಲ ಗುರು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಶಿಕ್ಷಕರ ಪಾತ್ರ ಮುಖ್ಯ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಬದುಕಿಗೆ ಒಳ್ಳೆಯ ಗುರು ಹಾಗೂ ನಿರ್ದಿಷ್ಟ ಗುರಿ ಅವಶ್ಯಕ ಎಂದರು.
ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ, ಜಿಲ್ಲಾ ಪ್ರಶಸ್ತಿ ವಿಜೇತರಿಗೆ ಹಿಂದಿನ ಸಾಲಿನ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷನಯನ ಕಾರಿಂಜಾ ಉಪಸ್ಥಿತರಿದ್ದರು.