ಉಡುಪಿ: ಇಂದಿರಾನಗರದ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದ ತನಿಖೆಗಾಗಿ ನೇಮಿಸಲಾಗಿದ್ದ ತಜ್ಞ ವೈದ್ಯರ ತನಿಖೆ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆ ಹಾಗೂ ಎಫ್ ಎಸ್ ಎಲ್ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ನಗರಸಭೆ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತ ಸಭೆಯಲ್ಲಿ ಸದಸ್ಯರೊಬ್ಬರು ಎತ್ತಿದ ಪ್ರಶ್ನೆಗೆ ಉತ್ತರಿಸಿದರು.
ಮಹಿಳೆಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ಸಿಒಡಿ ತನಿಖೆಯು ನಡೆಯುತ್ತಿದೆ ಎಂದು ತಿಳಿಸಿದರು.
ಐಸಿಯು ಭರ್ತಿ: ಮರಣ ಪ್ರಮಾಣ ಹೆಚ್ಚಳ
ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಅಪಪ್ರಚಾರದಿಂದ ಕೋವಿಡ್ ಪರೀಕ್ಷೆಗೆ ಹಿನ್ನಡೆಯಾಗಿದೆ. ರೋಗಿಗಳು ಕೊನೆಯ ಕ್ಷಣದಲ್ಲಿ ಗಂಭೀರ ಪರಿಸ್ಥಿತಿಯಲ್ಲಿ ಇರುವಂತಹ ಸಂದರ್ಭದಲ್ಲಿ ಐ.ಸಿ.ಯು ಚಿಕಿತ್ಸೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಐಸಿಯು ಭರ್ತಿಯಾಗಿದ್ದು, ಕೆಲವು ರೋಗಿಗಳು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಸಿಗದೆ ಸಾವನ್ನಾಪ್ಪುತ್ತಿದ್ದಾರೆ ಎಂದು ಹೇಳಿದರು.
ಕೋವಿಡ್ ಅನ್ನು ಬೇಗ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯವಿದೆ. ಆದ್ದರಿಂದ ಎಲ್ಲಾ ನಗರಸಭಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ, ಜ್ವರ ಶೀತ ಕೆಮ್ಮ ಲಕ್ಷಣಗಳಿದ್ದಲ್ಲಿ ಕೂಡಲೇ ಜಿಲ್ಲಾಸ್ಪತೆಯಲ್ಲಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾಡಳಿತದ ಮೂಲಕ ದಾಖಲಾಗುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.