ಹಕ್ಕು ಪತ್ರ ವಿತರಿಸುವ ಕಾರ್ಯ ವೇಗ ಪಡೆದುಕೊಂಡಿದೆ:ಸಚಿವೆ ಜಯಮಾಲಾ

ಕುಂದಾಪುರ: ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಜನರಿಗೆ ೯೪ಸಿ ಕಾಯ್ದೆಯಡಿ ಹಕ್ಕುಪತ್ರ ನೀಡುವ ಈ ಹಿಂದಿನ ಕಾಂಗ್ರೆಸ್ ಮತ್ತು ಈಗಿನ ಸಮ್ಮಿಶ್ರ ಸರ್ಕಾರದ ನಿರ್ಧಾರದಂತೆ ೯೪ಸಿ ಅಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ತನ್ಮೂಲಕ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದರು.

ಕುಂದಾಪುರ ಹಾಗೂ ಬೈಂದೂರು ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ತಾಲೂಕು ಮತ್ತು ವಂಡ್ಸೆ ಹೋಬಳಿಯ ೯೪ಸಿ ಫಲಾನುಭವಿಗಳಿಗೆ ಸೋಮವಾರ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

ಅರಣ್ಯದಲ್ಲಿ ವಾಸಿಸುತ್ತಿರುವ ಜನರಿಗೆ ೯೪ಸಿಸಿ ಅಡಿಯಲ್ಲಿ ಹಕ್ಕುಪತ್ರ ವಿತರಿಸುವ ಬಗ್ಗೆ ಸದನದಲ್ಲಿ ಚರ್ಚೆ ನಡೆದಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೂ ಮನವಿ ಮಾಡಿದ್ದು, ಅನೇಕ ರೀತಿಯ ಹೋರಾಟ ಕೂಡ ನಡೆದಿದೆ. ಅರಣ್ಯ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕುರಿತು ಕಾಯ್ದೆಗೆ ಮಾರ್ಪಾಟು ಮಾಡುವ ಕಾರ್ಯ ನಡೆಯುತ್ತಿದ್ದು, ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಿಸಲು ಸರಕಾರ ಕ್ರಮಕೈಗೊಳ್ಳಲಿದೆ ಎಂದು ಸಚಿವೆ ಭರವಸೆ ನೀಡಿದರು.

ಆಡಳಿತದಲ್ಲಿ ಪಾರದರ್ಶಕತೆ ತಂದು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಕಾರ್ಯ ಮಾಡುತ್ತಿದೆ. ಹಕ್ಕು ಪತ್ರ ಪಡೆದುಕೊಂಡವರು ಬಸವ ವಸತಿ ಮತ್ತು ಅಂಬೇಡ್ಕರ್ ವಸತಿ ಯೋಜನೆಗಳನ್ನು ಬಳಸಿಕೊಂಡು ಸುಂದರ ಮನೆ ನಿರ್ಮಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು. ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಡೀಮ್ಡ್ ಫಾರೆಸ್ಟ್ ನೆಪದಲ್ಲಿ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಹಕ್ಕುಪತ್ರದಿಂದ ವಂಚಿತರನ್ನಾಗಿ ಮಾಡಬಾರದು. ಸಮಾಜದ ಕಟ್ಟಕಡೆಯ ಜನರು ಮನೆಯನ್ನು ಹೊಂದಿದಾಗ ಸರಕಾರದ ಯೋಜನೆ ಸಾರ್ಥಕತೆಯನ್ನು ಪಡೆದುಕೊಳ್ಳಲಿದೆ ಎಂದರು.ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ, ಜಿಪಂ ಸದಸ್ಯರಾದ ಶೋಭಾ ಜಿ.ಪುತ್ರನ್, ಸುರೇಶ ಬಟವಾಡಿ, ಗೌರಿ ದೇವಾಡಿಗ, ಜ್ಯೋತಿ ಎಂ, ರೋಹಿತ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಕುಂದರ್, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಕೆ., ತಾಪಂ ಸದಸ್ಯರಾದ ರಾಜು ದೇವಾಡಿಗ, ವಾಸುದೇವ ಪೈ, ಪುಷ್ಪರಾಜ ಶೆಟ್ಟಿ, ಕರಣ್ ಪೂಜಾರಿ, ಪ್ರಥ್ವಿರಾಜ್ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಸುಧಾಕರ ಆಚಾರ್ಯ, ತಮ್ಮಯ್ಯ ದೇವಾಡಿಗ, ಚಂದ್ರಶೇಖರ ಪೂಜಾರಿ, ತಾಪಂ, ಗ್ರಾಪಂ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.