ಬಿಜೆಪಿಯಿಂದ ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬುವ ಕೆಲಸವಾಗಲಿದೆ: ಸಚಿವ ಕೋಟ

ಉಡುಪಿ: ಸಮಾಜದ ವಿವಿಧ ಜಾತಿಗಳನ್ನೊಳಗೊಂಡಿರುವ ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಪರಿಣಾಮಕಾರಿ ಪಕ್ಷ ಸಂಘಟನೆ, ಕ್ರಿಯಾಶೀಲತೆ, ಹೋರಾಟ ಮತ್ತು ಮಾದರಿ ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಕ್ಕೆ ಶಕ್ತಿ ಕೆಲಸ ಮಾಡುತ್ತಿದೆ ಎಂದು ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಇಂದು ಸರ್ವಸ್ಪರ್ಶಿ ಸರ್ವವ್ಯಾಪಿಯಾಗಿದೆ. ಗ್ರಾಮ ಪಂಚಾಯತ್‌ನಿಂದ ಕೇಂದ್ರ ಸರಕಾರದ ವರೆಗಿನ ಎಲ್ಲ ಸ್ತರಗಳಲ್ಲಿ ಪಕ್ಷ ಅಧಿಕಾರದಲ್ಲಿದೆ. ಇಂತಹ ಸುಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಯೋಚನೆ ಯೋಜನೆಗಳನ್ನು ಸಾಕಾರಗೊಳಿಸುವತ್ತ ಸರ್ವರ ಸಂಘಟಿತ ಪ್ರಯತ್ನದ ಅಗತ್ಯವಿದೆ ಎಂದರು.

ಕೇಂದ್ರ ಸರಕಾರದ ವಿನೂತನ ಯೋಜನೆಗಳು ಮತ್ತು ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯಿಂದ ಸಿಗುವ ವಿವಿಧ ಸವಲತ್ತುಗಳ ವಿಸ್ತೃತ ಮಾಹಿತಿ ಪಡೆದು ಅರ್ಹ ಫಲಾನುಭವಿಗಳಿಗೆ ಪ್ರಯೋಜನವನ್ನು ತಲುಪಿಸುವ ನಿಟ್ಟಿನಲ್ಲಿ ಮೋರ್ಚಾದ ಎಲ್ಲಾ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಬದ್ಧತೆ ಮತ್ತು ಕ್ರಿಯಾಶೀಲತೆಯಿಂದ ಪಕ್ಷದಲ್ಲಿ ತೊಡಗಿಸಿಕೊಂಡಾಗ ಅವಕಾಶಗಳು ತಾನಾಗಿಯೇ ಒಲಿದು ಬರುತ್ತವೆ. ಸದ್ಯದಲ್ಲೇ ಬರಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳ ಗರಿಷ್ಠ ಅಂತರದ ಗೆಲುವಿಗೆ ಅಹರ್ನಿಶಿ ಶ್ರಮಿಸುವ ಮೂಲಕ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತದ ಚುಕ್ಕಾಣಿ ಹಿಡಿಯುವಂತೆ ಎಲ್ಲರೂ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಬಾಬು, ವಿವೇಕಾನಂದ ಡಬ್ಬಿ, ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತçತ ಮಾಹಿತಿ ನೀಡಿದರು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಭಾರಿ ರೇಶ್ಮಾ ಉದಯ ಶೆಟ್ಟಿ, ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್, ಅರುಣ್ ಬಾಣ, ಬಿಜೆಪಿಯ ವಿವಿಧ ಸ್ತರದ ಪದಾಧಿಕಾರಿಗಳು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.