ಮಂಗಳೂರು: ಪಂಚಾಯತ್ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ದಕ್ಷಿಣ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂದು ತಿಳಿದುಬಂದಿದೆ.
ಭಾನುವಾರ ಮಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಪಕ್ಷಕ್ಕೆ ಸೇರಲು ರಾಜೇಂದ್ರ ಕುಮಾರ್ ಅವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಭಾಗಗಳಲ್ಲಿ ರಾಜೇಂದ್ರ ಕುಮಾರ್ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ. ಹೀಗಾಗಿ ಅವರನ್ನು ಪಕ್ಷಕ್ಕೆ ಕರೆತರುವ ಕೆಲಸ ನಡೆಯುತ್ತಿದೆ ಎನ್ನಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಒಕ್ಕೂಟದ ಪ್ರಸ್ತುತ ಅಧ್ಯಕ್ಷರೂ ಆಗಿರುವ ರಾಜೇಂದ್ರ ಕುಮಾರ್ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಅಲ್ಲದೆ, 2019 ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸ್ಥಾನದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ 27 ವರ್ಷಗಳಿಂದ ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾಗಿ ಸತತವಾಗಿ ಆಯ್ಕೆಯಾಗುವ ಮೂಲಕ ಅವರು ದಾಖಲೆ ನಿರ್ಮಿಸಿದ್ದಾರೆ.
ಕರಾವಳಿಯು ತನ್ನ ಭದ್ರಕೋಟೆ ಆಗಿದ್ದರೂ ಬಿಜೆಪಿಗೆ ಬ್ಯಾಂಕ್ ಚುನಾವಣೆಯಲ್ಲಿ ಯಶಸ್ಸನ್ನು ಸವಿಯಲು ಸಾಧ್ಯವಾಗಲಿಲ್ಲ. ಪಂಚಾಯತ್ ಚುನಾವಣೆಗಳಲ್ಲಿ ಪಕ್ಷಕ್ಕೆ ದೊಡ್ಡ ಯಶಸ್ಸನ್ನು ಕಾಣಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದರ ಹಿಂದೆ ಕೇವಲ ಪಂಚಾಯತ್ ಚುನಾವಣೆಗಳ ಗೆಲುವಷ್ಟೇ ಅಲ್ಲದೆ, 2024 ರ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುನ್ನಡೆ ಸಾಧಿಸುವಲ್ಲಿ ಇದು ಸಹಾಕಾರಿಯಾಗಲಿದೆ ಎಂಬುವುದು ಬಿಜೆಪಿಯ ಲೆಕ್ಕಾಚಾರ.
ಇದು ಮೊದಲ ಪ್ರಯತ್ನವಲ್ಲ:
ರಾಜೇಂದ್ರ ಕುಮಾರ್ ಅವರನ್ನು ಬಿಜೆಪಿ ಮನವೊಲಿಸುತ್ತಿರುವುದು ಇದು ಮೊದಲ ಸಲ ಅಲ್ಲ ಈ ಹಿಂದೆಯೂ ಸಾಕಷ್ಟು ಬಾರಿ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಮತ್ತು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.