ಉಡುಪಿ: ಎಲ್ಲ ಸ್ತರಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ 130ಕ್ಕೂ ಹೆಚ್ಚು ಗ್ರಾಮ ಪಂಚಾಯತ್ಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆಗಾಗಿ ಡಿ.1ರಂದು ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಲು ಸರ್ವ ಸನ್ನದ್ದವಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷದ ರಾಜ್ಯ ನಾಯಕರ ಸಮಾಗಮದೊಂದಿಗೆ ಜಿಲ್ಲೆಯ 2 ಕಡೆಗಳಲ್ಲಿ ನಡೆದ ಮಂಡಲವಾರು ಗ್ರಾಮ ಸ್ವರಾಜ್ಯ ಸಮಾವೇಶಗಳು ಅತ್ಯಂತ ಯಶಸ್ವಿಯಾಗಿದ್ದು ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹಾಗೂ ಹೊಸ ಹುಮ್ಮಸ್ಸು ಮೂಡಿಸಿದೆ. ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರತೀ ಬೂತ್ ಮಟ್ಟದಲ್ಲಿ ಪಂಚರತ್ನ, ಪೇಜ್ ಪ್ರಮುಖ್ ನೇಮಕ, ಗ್ರಾಮ ಪಂಚಾಯತ್ಗಳ ಮಟ್ಟದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳ ಆಯೋಜನೆ ಪಕ್ಷ ಸಂಘಟನೆಗೆ ಶಕ್ತಿ ತುಂಬಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚೈತನ್ಯ ತುಂಬಿದೆ ಎಂದರು.
ಪರಿಣಾಮಕಾರಿ ಚುನಾವಣಾ ಪೂರ್ವ ತಯಾರಿಗಾಗಿ ಮಂಡಲವಾರು ಚುನಾವಣಾ ಪ್ರಭಾರಿಗಳ ಜೊತೆಗೆ ಪ್ರತೀ ಮಹಾ ಶಕ್ತಿಕೇಂದ್ರ ವ್ಯಾಪ್ತಿಗೆ ಒಬ್ಬರಂತೆ ಪ್ರಮುಖರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು
ಬಿಜೆಪಿ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ಸಂಘಟನೆಗೂ ಭದ್ರ ಬುನಾದಿಯಾಗಲಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಜವಾಬ್ದಾರಿ ನಿರ್ವಹಣೆಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸಾಗತಿಸಿ, ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.