ಪ್ರಧಾನಿ ಮೋದಿಯವರ ಕನಸು ಸಕಾರಗೊಳಿಸಿ: ಜನಸೇವಕ್ ಸಮಾವೇಶದಲ್ಲಿ ಸಿ.ಟಿ. ರವಿ ಕರೆ

ಉಡುಪಿ: ನಾವು ಪ್ರಧಾನಿ ಮೋದಿ ಅವರ ಕನಸು ಸಕಾರಗೊಳಿಸಬೇಕು. ಹಾಗಾಗಿ ಅವರ ಪ್ರತಿರೂಪದಂತೆ ನಾವು ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಇಂದು ನಡೆದ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದರು.

ಪಕ್ಷದ ಸಿದ್ದಾಂತಕ್ಕೆ ನಾವು ಬದ್ಧರಾಗಿರಬೇಕು. ಜನರು ನಮ್ಮ ಕರ್ತವ್ಯದ ಮೂಲಕ ಮೋದಿ ಅವರನ್ನು ನೋಡುತ್ತಾರೆ. ಹಾಗಾಗಿ ನಾವು ಮೋದಿ ಅವರ ಪ್ರತಿರೂಪವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರಧಾನಿ ಮೋದಿ ಅವರು ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಕಾರ್ಯ ಮಾಡಬೇಕು. ಸಮಾಜವನ್ನು ಬದಲಾವಣೆಯೊಂದಿಗೆ ಮುನ್ನಡೆಸಿಕೊಂಡು ಹೋಗುವುದರ ಜತೆಗೆ ಸಾಮಾಜಿಕ ಪರಿವರ್ತನೆಗೆ ಹೆಚ್ಚಿನ ಒತ್ತು ನೀಡುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ದೇಶದ ಜನರು ಕಂಡಂತಹ ಕನಸುಗಳನ್ನು ಪ್ರಧಾನಿ ಮೋದಿಯವರು ಹಂತ ಹಂತವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಹಿಂದೂಗಳ ನೂರಾರು ವರ್ಷಗಳ ಕನಸಾಗಿದ್ದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಆರಂಭ ಆಗಿದೆ. ಇನ್ಮುಂದೆ ದಿನಗಳಲ್ಲಿ ಕಾಶಿಯಲ್ಲಿ ವಿಶ್ವನಾಥ ದೇವಸ್ಥಾನ ಹಾಗೂ ಮಥುರದಲ್ಲಿ ಶ್ರೀ ಕೃಷ್ಣನ ದೇವಾಲಯಗಳು ನಿರ್ಮಾಣವಾಗಲಿದೆ ಎಂದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಶಾಸಕರು ಮತ್ತು ಮಂತ್ರಿಗಳ ಸಹಕಾರ ಪಡೆದು ಗ್ರಾಮೀಣ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ಈರಣ್ಣ ಕಡಾಡಿ , ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ. ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಪ್ರಕೋಷ್ಠದ ಸಂಚಾಲಕ ಯಶ್ಪಾಲ್ ಸುವರ್ಣ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮಂಗಳೂರು ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ಶ್ರೀಕಾಂತ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.