ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿ ತಾಲ್ಲೂಕಿನ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆ (ಜ. 18) ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭಾಗವಹಿಸಲಿದ್ದಾರೆ ಎಂದು ದೇವಳದ ಆಡಳಿತ ಮೊಕ್ತೇಸರ ಹಾಗೂ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ದೇಗುಲದದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5.30ಕ್ಕೆ ಧರ್ಮಸಭೆ ನಡೆಯಲಿದೆ. ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು, ಆಶೀರ್ವಚನ ನೀಡಲಿದ್ದಾರೆ. ದೇವಳದ ತಂತ್ರಿ ಪಾಡಿಗಾರು ವಾಸುದೇವ ತಂತ್ರಿ ಶುಭಸಂದೇಶ ನೀಡುವರು. ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶ್ರೀಮಹಿಷಮರ್ದಿನಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಕೆ. ರವಿರಾಜ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯ ಯಶ್‍ಪಾಲ್ ಎ. ಸುವರ್ಣ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಂದು ಬೆಳಿಗ್ಗೆ 10.21ಕ್ಕೆ ಶ್ರೀದೇವರಿಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಮಧ್ಯಾಹ್ನ 12.30 ಕ್ಕೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್, ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಪ್ರಭು ಬಿ. ಚವ್ಹಾಣ್, ಸಂಜೆ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಲಿದ್ದಾರೆ. ರಾತ್ರಿ 9 ರಿಂದ ಹನುಮಗಿರಿ ಮೇಳದ ಕಲಾವಿದರಿಂದ ತೆಂಕುತಿಟ್ಟು ಶ್ರೀನಿವಾಸ ಕಲ್ಯಾಣ-ಮಾಯಾ ಮಾರುತೇಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಕೀಲ ದಿವಾಕರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಕೆ. ಗೋಪಾಲ ಶೆಟ್ಟಿ, ಶೇಖರ ಜತ್ತನ್ನ, ಲಕ್ಷ್ಮಣ ಸೇರಿಗಾರ, ಲಕ್ಷ್ಮೀನಾರಾಯಣ ಆಚಾರ್ಯ, ಸುಂದರ ಅಮೀನ್, ಶೈಲಶ್ರೀ, ರಂಜನ್ ಕೆ., ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.