ಮಣಿಪಾಲ: ಟ್ಯಾಪ್ಮಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಒರಿಸ್ಸಾ ಮೂಲದ ಪೂರ್ಣಚಂದ್ರ ದಾಸ್ (23) ಹಾಗೂ ಕಮಲು ಎಂದು ಗುರುತಿಸಲಾಗಿದೆ. ಈ ಇಬ್ಬರು ಟ್ಯಾಪ್ಮಿಯಲ್ಲಿ ಕಳೆದ ಐದಾರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಬಂಧಿತರಿಂದ ₹ 70 ಸಾವಿರ ಮೌಲ್ಯದ 2.20 ಕಿ.ಲೋ. ತೂಕದ ಗಾಂಜಾ, 2 ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಶಾಂತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೆನ್ ಅಪರಾಧ ಪೊಲೀಸ್ ಠಾಣೆಯ ಪಿ.ಎಸ್.ಐ ನಾರಾಯಣ ಅವರು ಪೊಲೀಸ್ ಅಧೀಕ್ಷಕರ ಅನುಮತಿ ಪಡೆದು, ಪತ್ರಾಂಕಿತ ಅಧಿಕಾರಿ, ಪಂಚರು ಹಾಗೂ ಸಿಬ್ಬಂದಿಯವರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.