ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ಇನ್ನಷ್ಟು ಉತ್ತೇಜನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ನಡೆಸಲು ಒಂದು ಕೋಟಿ ರೂ. ಸಹಾಯಧನ ನೀಡಲು ಆದೇಶ ಹೊರಡಿಸಿದೆ.
ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳನ್ನು ಸಹಾಯಧನ ನೀಡಲು ಸರ್ಕಾರ ತೀರ್ಮಾನಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ. ಗಳಂತೆ 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ ಗಳಂತೆ 50 ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.