ಉಡುಪಿ, ಮಣಿಪಾಲ ಸಹಿತ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 10 ರಿಂದ 20 ರವರೆಗೆ ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ 8 ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ ಇಂದು ವಿಡಿಯೋ ಕಾನ್ಫರೆನ್ಸ್​ನಲ್ಲಿ ಪಾಲ್ಗೊಂಡಿದ್ದ ಸಿಎಂ, ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಮೈಸೂರು ನಗರ, ಮಂಗಳೂರು ನಗರ, ಕಲಬುರಗಿ ನಗರ, ಬೀದರ್ ನಗರ, ತುಮಕೂರು ನಗರ, ಉಡುಪಿ ಮತ್ತು ಮಣಿಪಾಲದಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದರು.

ಅಗತ್ಯ ವಸ್ತು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಲಿವೆ. ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಇದು ಕೇವಲ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಉಳಿದಂತೆ ಇತಿ ಮಿತಿಗಳಲ್ಲೇ ಕಾರ್ಯಕ್ರಮ ಮಾಡಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದರು.