ಉತ್ತರಾಖಂಡದ ಸಿಎಂ ತೀರಥ್ ಸಿಂಗ್ ರಾವತ್ ರಾಜೀನಾಮೆ

ಡೆಹ್ರಾಡೂನ್‌: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ನಾಲ್ಕು ತಿಂಗಳ‌ಲ್ಲೇ ತೀರಥ್ ಸಿಂಗ್ ರಾವತ್ ಅವರು ಶುಕ್ರವಾರ ರಾತ್ರಿ 11 ಗಂಟೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ನಾಯಕತ್ವ ಬದಲಾವಣೆಗೆ ಸಂಬಂಧಿಸಿ ಚಟುವಟಿಕೆಗಳು ಗರಿಗೆದರಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತೀರಥ್‌ ಸಿಂಗ್‌ ಅವರು ಶುಕ್ರವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದರು. ಪಕ್ಷವು ರಾವತ್‌ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ ಬೆನ್ನಲ್ಲೆ, ಅವರು ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.

ಪ್ರಸ್ತುತ ಲೋಕಸಭಾ ಸದಸ್ಯರಾಗಿರುವ ರಾವತ್‌, ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಬೇಕಿದ್ದರೆ ಸೆಪ್ಟೆಂಬರ್‌ 10ರೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿತ್ತು. ಆದರೆ, ಚುನಾವಣಾ ಆಯೋಗವು ರಾಜ್ಯದಲ್ಲಿ ತೆರವಾಗಿರುವ ಎರಡು (ಗಂಗೋತ್ರಿ ಮತ್ತು ಹಲ್ದವಾನಿ) ಕ್ಷೇತ್ರಗಳಿಗೆ ಕೋವಿಡ್‌–19ರ ಕಾರಣಕ್ಕೆ ಉಪಚುನಾವಣೆ ನಡೆಸುವ ಸಾಧ್ಯತೆಗಳು ಕಡಿಮೆಯಾಗಿರುವುದರಿಂದ ನಾಯಕತ್ವ ಬದಲಾವಣೆ ಅನಿವಾರ್ಯ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿತ್ತು.

ಪ್ರಸ್ತುತ ವಿಧಾನಸಭೆಯ ಅವಧಿ ಮುಂದಿನ ಮಾರ್ಚ್‌ನಲ್ಲಿ ಮುಕ್ತಾಯವಾಗಲಿದೆ. ಹೀಗಿರುವಾಗ ಚುನಾವಣಾ ಆಯೋಗ ಉಪಚುನಾವಣೆ ನಡೆಸುವ ಸಾಧ್ಯತೆಗಳು ಕ್ಷೀಣ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು.

ಉತ್ತರಾಖಂಡದ ಬಿಜೆಪಿ ಶಾಸಕರು ಇಂದು ಸಭೆ ಸೇರಲಿದ್ದು, ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.