ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ-ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಜುಲೈ 16 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಭಾನುವಾರದಿಂದಲೇ ಮಳೆಯಾಗುತ್ತಿದ್ದು, ಇದರಿಂದ ವ್ಯವಸಾಯಕ್ಕೆ ಭೂಮಿ ಹದ ಮಾಡಿಕೊಂಡು ಮಳೆಗಾಗಿಯೇ ಕಾಯುತ್ತಿದ್ದ, ರೈತಾಪಿ ಸಮುದಾಯಕ್ಕೆ ನೆಮ್ಮದಿ ದೊರಕಿದಂತಾಗಿದೆ. ಈ ಭಾರಿ ದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.