ಕಾಪು: ಕಾರೊಂದು ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಉಚ್ಚಿಲ–ಮುದರಂಗಡಿ ರಸ್ತೆಯ ಎಲ್ಲೂರು ಬಳಿಯ ಪಣಿಯೂರು ಪೆಜತ್ತಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಕಾಪು ಕೊಪ್ಪಲಂಗಡಿ ನಿವಾಸಿ ರವೀಂದ್ರ ಪೂಜಾರಿ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಉದ್ಯಾವರ ಬಲಾಯಿಪಾದೆಯಲ್ಲಿ ಗ್ಯಾರೇಜ್ ನಡೆಸುತ್ತಿದ್ದರು. ಭಾನುವಾರ ರಾತ್ರಿ ಎಲ್ಲೂರಿಗೆ ತೆರಳಿದ್ದು, ಅಲ್ಲಿಂದ ವಾಪಸಾಗುತ್ತಿರುವ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ರವೀಂದ್ರ ಅವರು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ನಸುಕಿನ ವೇಳೆ ಪೇಪರ್ ವಿತರಕರೊಬ್ಬರು ನೋಡಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತರು ತಾಯಿ, ಸಹೋದರರು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.












