ಕೇರಳದಲ್ಲಿ ನಿಫಾ ವೈರಸ್ ಪತ್ತೆ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಇದೀಗ ನಿಫಾ ವೈರಸ್ ಕೂಡ ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡುವ ಪ್ರಕ್ರಿಯೆ ಹಾಗೂ ಕೊರೊನಾ ಪರೀಕ್ಷೆಯನ್ನು ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ನಿಫಾ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ತಜ್ಞರ ಬಳಿ ತಿಳಿದುಕೊಳ್ಳಲು ಹೇಳಿದ್ದು ಯಾವ ರೀತಿ ಹರಡುತ್ತದೆ, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಲಹೆ ನೀಡುವಂತೆ ಮತ್ತು ವರದಿ ನೀಡುವಂತೆ ಸೂಚಿಸಿದ್ದೇನೆ. ನಿಫಾ ವೈರಸ್ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್:
ಕೇರಳದ ಕೋಝಿಕ್ಕೋಡು ಜಿಲ್ಲೆಯಲ್ಲಿ ನಿಫಾ ವೈರಸ್ ಗೆ ಬಾಲಕನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಜಿಲ್ಲೆಗಳಾದ ಮೈಸೂರು, ಕೊಡಗು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಗೆ ಹೊರರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ.
ಮೂರು ವರ್ಷಗಳ ಹಿಂದೆ ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡಿದೆ.