ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ.
ಆಸ್ಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದ್ದು, ಅವರ ನಿಧನದಿಂದ ನಾಡು ಓರ್ವ ಮುಸ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ. ಅವರು ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸಲ್ಲಿಸಿರುವ ಸೇವೆ ಅಪಾರವಾದುದು. ಅವರು ಪೇಜಾವರ ಮಠ ಸಹಿತ ಉಡುಪಿಯ ಎಲ್ಲ ಅಷ್ಟಮಠಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಮಠದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಆಸ್ಕರ್ ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸರಳ ಸಜ್ಜನ ನಾಯಕ: ಶೋಭಾ
ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆಯವರು ಸಂತಾಪ ಸೂಚಿಸಿದ್ದಾರೆ.
ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು, ಅವರ ಸೇವೆ ಸ್ಮರಣೀಯ ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ದೇವರು ಅವರಿಗೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಬಂಧು-ಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸ್ಕರ್ ಸೇವೆ ಅನನ್ಯ: ಸುನಿಲ್ ಕುಮಾರ್
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನ ಹಿರಿಯ ನಾಯಕ ,ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಲೋಕಸಭಾ ಸದಸ್ಯರಾಗಿ ರಾಜ್ಯ ಸಭಾ ಸದಸ್ಯರಾಗಿ ಅವರು ಸಲ್ಲಿಸಿದ ಸೇವೆ ಅನನ್ಯವಾದದ್ದು. ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ ಉಡುಪಿಯಲ್ಲಿ ಹುಟ್ಟಿ, ನಂತರ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದದ್ದು ಒಂದು ಸಾಹಸಗಾಥೆ.
ಅವರ ನಿಧನದಿಂದ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅತ್ಯುತ್ತಮ ಜನನಾಯಕ ನನ್ನ ಕಳೆದುಕೊಂಡಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.