ಉಡುಪಿ: ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿ ಕುಂತಲ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರವನ್ನು ಇಂದು ಉದ್ಘಾಟಿಸಿ, ಬಳಿಕ ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.
ನಮ್ಮ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಗೋವಾದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಎಷ್ಟು ಸದ್ಬಳಕೆ ಮಾಡಿಕೊಳ್ಳಬೇಕಿತ್ತೋ ಅಷ್ಟು ಆಗಿಲ್ಲ ಎಂದು ಅವರು ವಿಷಾದಿಸಿದರು.
ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಸದಂತೆ ನಿರ್ಬಂಧ ಹಾಕಿರುವ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದೆ. ಇದರಿಂದ ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪವೂ ಇದೆ. ಹೀಗಾಗಿ ಈ ಕಾನೂನನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.