ಉಡುಪಿ: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿ ಮತ ಚಲಾಯಿಸಲಿರುವ ವಿಧಾನ ಪರಿಷತ್ ಚುನಾವಣೆಯು ಡಿ.10ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನ.19 ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ “ಜನಸ್ವರಾಜ್ ಸಮಾವೇಶ”ವು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅವರು ಇಂದು ಹೋಟೆಲ್ ಕಿದಿಯೂರ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಯೋಜನೆಯಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ನಾಲ್ಕು ತಂಡಗಳು ರಾಜ್ಯಾದ್ಯಂತ ನ.19ರಿಂದ ನ.23ರ ವರೆಗೆ ಜನಸ್ವರಾಜ್ ಸಮಾವೇಶವನ್ನು ಪರಿಣಾಮಕಾರಿಯಾಗಿ ನಡೆಸಿಕೊಡಲಿವೆ ಎಂದರು.
ಉಡುಪಿಯಲ್ಲಿ ನ.19ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ವಿ. ಕುಮಾರ್, ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ಎಮ್.ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲೆಯ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಜನಸ್ವರಾಜ್ ಸಮಾವೇಶದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರು ಪ್ರಮುಖ ಅಪೇಕ್ಷಿತರಾಗಿ ಪಾಲ್ಗೊಳ್ಳಲಿದ್ದು, ಮಾಜಿ ಜಿ.ಪಂ. ಮತ್ತು ತಾ.ಪಂ. ಸದಸ್ಯರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಮತ್ತು ಅಭಿವೃದ್ಧಿಪರ ಆಡಳಿತ, ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣದ ಜೊತೆಗೆ ಪ್ರತಿನಿಧಿಗಳ ಗೌರವ ಧನ ಹೆಚ್ಚಳ, ಹಳ್ಳಿಗಳ ಪುನಶ್ಚೇತನ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಮುಂತಾದ ಪೂರಕ ಅಂಶಗಳು ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿಯ ಪ್ರಚಂಡ ಗೆಲುವಿಗೆ ವರದಾನವಾಗಲಿದೆ ಎಂದು ಕುಯಿಲಾಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾವೇಶದ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ಉಪಸ್ಥಿತರಿದ್ದರು.