ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ರದ್ದು: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ನೂತನವಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನ ಉದ್ದೇಶಿಸಿ ಮಾತನಾಡಿದರು. ಸರ್ಕಾರ ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೇವು.

ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ, ರೈತರ ಅನುಕೂಲಕ್ಕಾಗಿ, ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಲು ಬಯಸುತ್ತೇನೆ ಎಂದರು.

ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

ಯಾವುದು ನೂತನ ಕೃಷಿ ಕಾಯ್ದೆಗಳು…?

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020

ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020

ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020