ತುಮಕೂರು: ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 48 ಸಾವಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿದ್ದು, ಯಾವ ಶಾಲೆಯಲ್ಲೂ ಮಕ್ಕಳಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವಂತೆ ಆರೋಗ್ಯವನ್ನೂ ಗಮನಿಸಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪೋಷಕರು ಆತಂಕ ಪಡುವ ಅಗತ್ಯವಿಲ್ಲ:
ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಸ್ತುತ ಹಲವರು ಮಾಸ್ಕ್ ಬಳಸುವುದನ್ನೇ ಬಿಟ್ಟಿದ್ದಾರೆ. ಶಾಲೆಯಲ್ಲಿ ಹಾಗೂ ಶಾಲೆಯಿಂದ ಮನೆಗೆ ಹೋಗುವ ಸಮಯದಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ನೋಡಿಕೊಳ್ಳಲು ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಕೋವಿಡ್ ಮತ್ತೆಯಾದ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತದೆ. ಕೋವಿಡ್ ನಿಯಮ ಪಾಲನೆ ಕಟ್ಟುನಿಟ್ಟು ಮಾಡಲಾಗಿದೆ ಎಂದರು.