ಬಾರಿಕೆರೆ ಕೊರಗ ಕುಟುಂಬದ ಮೇಲೆ ಹಲ್ಲೆ ಪ್ರಕರಣ; ಪೊಲೀಸರ ವಿರುದ್ಧ ಕ್ರಮಕ್ಕೆ ಸಚಿವ ಕೋಟ ಸೂಚನೆ

ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗರ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕರ ಮೇಲೆ ಹಲ್ಲೆ ಮಾಡಿರುವುದನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು ಇಂತಹ ಚಟುವಟಿಕೆಗಳನ್ನು ಸರಕಾರ ಸಹಿಸುವುದಿಲ್ಲ. ಈಗಾಗಲೇ ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಪೋಲಿಸರ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಹೇಳಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಮಾಡಿದ್ದಾಗಿ ಹೇಳಿದ್ದಾರೆ.
ಸಂತ್ರಸ್ತ ಕೊರಗ ಜನಾಂಗಕ್ಕೆ ನ್ಯಾಯ ಒದಗಿಸುವಲ್ಲಿ ಮತ್ತು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾವುದೇ ಆತಂಕ ಬೇಡ. ನಾಳೆ ಸಂತ್ರಸ್ತರ ಮನೆಗೆ ಭೇಟಿ ನೀಡಲಿದ್ದು, ನೊಂದ ಕುಟುಂಬದ ಜೊತೆ ಚರ್ಚಿಸುವುದಾಗಿ ಸಚಿವ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ