ಉಡುಪಿ: ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಅನಪೇಕ್ಷಿತ ಘಟನೆಗಳ ಈ ಪರಿಪಕ್ವ ಕಾಲದಲ್ಲಿ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಮಾ.13ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಜಿಲ್ಲಾ ಪ್ರಶಿಕ್ಷಣ ವರ್ಗದ ಸಮಾರೋಪ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ವಿಸ್ತಾರಕ ಯೋಜನೆಯಡಿ ಈಗಾಗಲೇ ವಿಸ್ತಾರಕರಾಗಿ ನಿಯೋಜನೆಗೊಂಡಿರುವ ಪಕ್ಷದ ಪದಾಧಿಕಾರಿಗಳು ನಿಗದಿತ ಶಕ್ತಿಕೇಂದ್ರಗಳ ವ್ಯಾಪ್ತಿಯಲ್ಲಿ ಬೂತ್ ಸಶಕ್ತೀಕರಣದಂತಹ ಜವಾಬ್ದಾರಿಯನ್ನು ನಿರ್ವಹಿಸುವುದು, ಮಹಾ ಶಕ್ತಿಕೇಂದ್ರಗಳ ಪ್ರಭಾರಿಗಳು ತಮ್ಮ ಸಭೆಗಳನ್ನು ನಡೆಸುವುದು, ಸ್ಥಾನೀಯ ಮಟ್ಟದಲ್ಲಿ ಫಲಾನುಭವಿಗಳ ಸಭೆಗಳನ್ನು ಆಯೋಜಿಸುವುದು ಇವೇ ಮುಂತಾದ ಕಾರ್ಯ ಚಟುವಟಿಕೆಗಳ ಮೂಲಕ ಮುಂಬರಲಿರುವ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಸರ್ವ ಸನ್ನದ್ಧರಾಗುವಂತೆ ಪಕ್ಷ ಸಂಘಟನೆಗೆ ವೇಗವನ್ನು ನೀಡಬೇಕು ಎಂದು ಕುಯಿಲಾಡಿ ತಿಳಿಸಿದರು.
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುವ ನಿರ್ಣಯ ಮತ್ತು ಯುದ್ಧ ಪೀಡಿತ ರಾಷ್ಟ್ರ ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತಂದಿರುವ ಕೇಂದ್ರ ಸರಕಾರವನ್ನು ಅಭಿನಂದಿಸುವ ನಿರ್ಣಯವನ್ನು ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಜಿಲ್ಲಾ ಪ್ರಶಿಕ್ಷಣ ವರ್ಗದ ಶಿಬಿರಾರ್ಥಿಗಳು ಸಭೆಯಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಜಿಲ್ಲಾ ಪ್ರಶಿಕ್ಷಣ ವರ್ಗದ ಯಶಸ್ವೀ ಆಯೋಜನೆಗೆ ಕೈಜೋಡಿಸಿದ ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಮಾರ್ಗದರ್ಶನದ ಬಿಜೆಪಿ ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ ನೇತೃತ್ವದ ಪ್ರಭಂಧಕರ ತಂಡ ಹಾಗೂ ಕುಂದಾಪುರ ಮಹಿಳಾ ಮೋರ್ಚಾ ಪದಾಧಿಕಾರಿಗಳ ತಂಡವನ್ನು ಈ ಸಂದರ್ಭದಲ್ಲಿ ಗುರುತಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ರಘುವೀರ್ ಶೆಣೈ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಜಿಲ್ಲಾ ಪ್ರಶಿಕ್ಷಣ ವರ್ಗದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.