ಉಡುಪಿ: ಹಿಜಾಬ್ ಕುರಿತ ರಾಜ್ಯ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಶಾಲೆ, ಕಾಲೇಜುಗಳಿಗೆ ಮಾ.15 ರಂದು ರಜೆ ಘೋಷಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಮಂಗಳವಾರ ಒಂದು ದಿನದ ರಜೆ ನೀಡಲಾಗುವುದು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿದ್ದು, ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿ ತೀರ್ಪಿಗೆ ಸಂಬಂಧಿಸಿ ಯಾವುದೇ ಪ್ರತಿಭಟನೆಯಾಗಲಿ, ಸಂಭ್ರಮಾಚರಣೆಯಾಗಲಿ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.