ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 1 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಉಡುಪಿ ಬೋರ್ಡ್ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು, ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ, ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆಯುವಂತೆ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ವಳಕಾಡು ಸರಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.