ಯುವಜನತೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಯುವಜನತೆ ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆಯ್ಕೆಯ ಉದ್ಯೋಗ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು, ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ &  ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ|| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸುಮಾರು 2 ವರ್ಷಗಳ ಬಳಿಕ ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ನಡೆಯುತ್ತಿರುವ ಈ ಉದ್ಯೋಗ ಮೇಳದಲ್ಲಿ 23 ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸಿದ್ದು, 1500 ಕ್ಕೂ ಅಧಿಕ ಮಂದಿ ಉದ್ಯೋಗಕ್ಕೆ ನೊಂದಾಯಿಸಿಕೊಂಡಿದ್ದಾರೆ. ಜಿಲ್ಲೆಯ ಸ್ಥಳೀಯ ಉದ್ಯಮಿಗಳೂ ಸಹ ಈ ಉದ್ಯೋಗಮೇಳಕ್ಕೆ ಅಗತ್ಯ ಸಹಕಾರ ನೀಡಿದ್ದು, ತಮ್ಮ ಕೈಗಾರಿಕೆಗಳಲ್ಲಿ ಸ್ಥಳೀಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದು, ಯುವ ಜನತೆ ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಉದ್ಯೋಗ ಮೇಳದಲ್ಲಿ ಗರಿಷ್ಠ ಸಂಖ್ಯೆಯ ಉದ್ಯೋಗ ನೇಮಕಾತಿಗಳು ದೊರೆಯುವಂತಾಗಲಿ ಎಂದರು.

ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದುವುದೂ ಸಹ ಅಗತ್ಯವಾಗಿದ್ದು, ಉಡುಪಿಯ ಮಹಿಳಾ ಸ್ನಾತಕೋತ್ತರ ಕಾಲೇಜಿನಲ್ಲಿ 150 ಕ್ಕೂ ಅಧಿಕ ಮಂದಿಗೆ ಐ.ಎ.ಎಸ್, ಕೆ.ಎ.ಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಉಡುಪಿ ಮತ್ತು ದ.ಕ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಮೂಲಕ ಯುವ ಜನತೆಗೆ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆಯಲು ನೆರವು ನೀಡುತ್ತಿದ್ದು, ಜಿಲ್ಲೆಯ ಯುವ ಜನತೆ ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯಗಳಿಗೆ ತೆರಳದೇ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆದು, ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಜಿ.ಶಂಕರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿ, ಕೌಶಲ್ಯಾಭಿವೃದ್ಧಿ ಹೊಂದುವುದರಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ  ಹೆಚ್ಚಳವಾಗಲಿದ್ದು, ಸಶಕ್ತ ಮತ್ತು ಸ್ವಾವಲಂಭಿಗಳಾಗಲು ಸಾಧ್ಯವಾಗಲಿದೆ. ಉದ್ಯೋಗ ಮೇಳದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಉದ್ಯೋಗ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕೆನರಾ ಬ್ಯಾಂಕ್‌ನ ಡಿ.ಜಿ.ಎಂ ಪ್ರದೀಪ್ ಭಕ್ತ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್  ಇಂಡಸ್ಟ್ರೀಸ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಡಾ.ವಿಜಯೇಂದ್ರ ರಾವ್, ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಬಾಳಿಗಾ, ಐ.ಎಂ.ಸಿ ಕೈಗಾರಿಕಾ ತರಬೇತಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ್ ಎಂ ಭಟ್ ಮತ್ತಿತರರು ಹಾಜರಿದ್ದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಆಶ್ರಿತಾ ವಂದಿಸಿದರು. ರಾಮಕೃಷ್ಣ ನಿರೂಪಿಸಿದರು.