ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರುಗಳು ಬಂದಲ್ಲಿ ಅವುಗಳಿಗೆ ಕೂಡಲೇ ಸ್ಪಂದಿಸಿ, ಪೀಡಿತರಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನು ನೆರವನ್ನು ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ದುರ್ಬಲರಾದ ಮಹಿಳೆಯರು ಹಾಗೂ ಮಕ್ಕಳ ಮೇಲೆ ಸಾಮಾನ್ಯವಾಗಿ ದಬ್ಬಾಳಿಕೆ ಹಾಗೂ ದೌರ್ಜನ್ಯಗಳು ಆಗುತ್ತಿರುತ್ತವೆ. ಇವುಗಳನ್ನು ಎದುರಿಸುವ ಶಕ್ತಿ ಅವರಲ್ಲಿ ಇರುವುದಿಲ್ಲ. ಅವರು ತೊಂದರೆಗೊಳಗಾದ ಬಗ್ಗೆ ಮಾಹಿತಿಗಳು ಕಂಡುಬಂದಲ್ಲಿ ಅವರಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸಬೇಕು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿರುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ತಾಲೂಕುಗಳ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳು ಪ್ರಸವ ಪೂರ್ವ ಸ್ಕ್ಯಾನಿಂಗಿಗೆ ಬರುತ್ತಿದ್ದಾರೆ ಎಂದ ಅವರು, ಬಾಲ್ಯ ವಿವಾಹ ಪ್ರಕರಣಗಳನ್ನು ಇತರ ಇಲಾಖೆ ಹಾಗೂ ಸಾರ್ವಜನಿಕರ ಸಹಾಯದಿಂದ ತಡೆಯಲು ಮುಂದಾಗಬೇಕು.
ಬಾಲ್ಯವಿವಾಹದಂತಹ ಪ್ರಕರಣಗಳು ಸಾಮಾನ್ಯವಾಗಿ ಶಾಲೆಯಿಂದ ಹೊರಗುಳಿದ ಮಕ್ಕಳಲ್ಲಿ ಆಗಿರುವ ಸಾಧ್ಯತೆ ಇರುತ್ತದೆ. ಜಿಲ್ಲೆಯಲ್ಲಿ 28 ಹೆಣ್ಣು ಮಕ್ಕಳು ಶಾಲೆಯಿಂದ ಹೊರಗಿರುವುದು ಕಂಡುಬಂದಿದ್ದು, ಇದರಲ್ಲಿ ಹೆಚ್ಚಾಗಿ ಕೊರಗ ಜನಾಂಗದ ಹೆಣ್ಣುಮಕ್ಕಳಿದ್ದಾರೆ. ಇವರು ಶಾಲೆಗೆ ಮರಳಿ ಬರುವಂತೆ ಮನವೊಲಿಸುವ ಕಾರ್ಯಕ್ಕೆ ಶಿಕ್ಷಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮುಂದಾಗಬೇಕು.
ಮಾದಕ ವಸ್ತು ಸೇವನೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರೊಂದಿಗೆ ಜಿಲ್ಲೆಯನ್ನು ನಶೆ ಮುಕ್ತವಾಗಿಸಬೇಕು. ಯುವ ಜನರು ಹೆಚ್ಚಾಗಿ ಇಂತಹ ವ್ಯಸನಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದ ಅವರು ಇದರಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಈ ಹಿಂದೆ ದೂರು ದಾಖಲಾದ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯವರು ನಿಗಾವಹಿಸಬೇಕೆಂದು ಸೂಚಿಸಿದರು.