ಮುಂಬಯಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾದ ಫಡ್ನವಿಸ್ ಮತ್ತು ಶಿಂಧೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಬಿಜೆಪಿ ಬೆಂಬಲ ನೀಡಲಿದ್ದು, ಶಿಂಧೆ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7.30 ಕ್ಕೆ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಶಿಂಧೆ ಜೊತೆಗಿದ್ದ ಶಾಸಕರು ಮತ್ತು ಬಿಜೆಪಿಯ ಶಾಸಕರು ಮಂತ್ರಿಮಂಡಲದಲ್ಲಿರಲಿದ್ದಾರೆ ಎಂದು ಫಡ್ನವೀಸ್ ತಿಳಿಸಿದ್ದಾರೆ.