ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ: ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಉಡುಪಿ: ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದಾಗಿ ಬಿತ್ತನೆ ಮಾಡಿದ ಭತ್ತದ ಬೆಳೆಯು ಹಾನಿಯಾಗಿದ್ದು, ರೈತರಿಗೆ
ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ರೈತರು ಮತ್ತೊಮ್ಮೆ ಕೃಷಿ ಮಾಡಲು ಅಗತ್ಯವಿರುವ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ.31 ರಷ್ಟು ಕಡಿಮೆ ಮಳೆಯಾಗಿ ಜುಲೈ 1 ರಿಂದ ಈವರೆಗೆ ವಾಡಿಕೆ ಮಳೆಗಿಂತ ಶೇ.136 ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ ಮಾಹೆಯಲ್ಲಿ ಕುಂಠಿತ ಮಳೆಯಿಂದಾಗಿ ಬಿತ್ತನೆ ಕಾರ್ಯಗಳು ನಿಗದಿತ ಪ್ರಮಾಣದಲ್ಲಿ ಆಗದೇ ಜೂನ್ ಕೊನೆಯ ವಾರದಲ್ಲಿ ಹಾಗೂ ಜುಲೈ ಮೊದಲ ವಾರದಲ್ಲಿ ಕೃಷಿ ಕಾರ್ಯಗಳು ಚುರುಕುಗೊಂಡಿದ್ದು, ಇದುವರೆಗೆ 13526 ಹೆಕ್ಟೇರ್ ಬಿತ್ತನೆ ಆಗಿದ್ದು, ಕಳೆದ 4-5 ದಿನಗಳಿಂದ ಸುರಿದ ಹೆಚ್ಚಿನ ಮಳೆಯಿಂದಾಗಿ ಅಂದಾಜು 1300 ಹೆಕ್ಟೇರ್‌ಗೂ ಅಧಿಕ ಬೆಳೆಹಾನಿ ಉಂಟಾಗಿದೆ ಎಂದರು.

ಮಳೆಯ ಪ್ರಮಾಣ ತಗ್ಗಿದ ನಂತರ ಬೆಳೆಹಾನಿಯನ್ನು ನಿಖರವಾಗಿ ಗುರುತಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಒದಗಿಸುವುದರ ಜೊತೆಗೆ ಸ್ಥಳೀಯವಾಗಿ ಬೇಡಿಕೆಯಿರುವ ಎಂ.ಓ.4 ಭಿತ್ತನೆ ಬೀಜವನ್ನು ರೈತರಿಗೆ ಸಹಾಯಧನದ ಅಡಿಯಲ್ಲಿ ವಿತರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಮಳೆಯಿಂದ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿದ್ದು ಸಮುದ್ರ ತೀರದಲ್ಲಿರುವ ಮೀನುಗಾರರಲ್ಲಿ ಆತಂಕ ಉಂಟಾಗಿದೆ. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಪ್ರಸ್ತುತ ಎನ್.ಡಿ.ಆರ್.ಎಫ್ ನಿಯಮಾವಳಿಯಲ್ಲಿ ಕಡಲ ಕೊರೆತ ಕಾಮಗಾರಿಗಳಿಗೆ ಅವಕಾಶವಿರುವುದಿಲ್ಲ. ಇದನ್ನು ಈ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ, ಮಾಹಿತಿ ನೀಡಿದಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಅತಿಯಾದ ಮಳೆಯಿಂದಾಗಿ ರಸ್ತೆಗಳು, ಶಾಲೆಗಳು, ಅಂಗನವಾಡಿ, ಸರ್ಕಾರಿ ಕಟ್ಟಡಗಳು, ಸೇತುವೆಗಳು ಸೇರಿದಂತೆ ಮತ್ತಿತರ ಶಾಶ್ವತ ಕಾಮಗಾರಿಗಳಿಗೆ ಹಾನಿ ಉಂಟಾಗಿದ್ದು, ಇದರ ಹಾನಿಯ ಮೊತ್ತವನ್ನು ನಿಖರವಾಗಿ ಗುರುತಿಸಿ ಸರ್ಕಾರಕ್ಕೆ ವರದಿ ನೀಡಬೇಕಂದು ಸೂಚನೆ ನೀಡಿದ ಅವರು, ಗ್ರಾಮೀಣ ಭಾಗದ ರಸ್ತೆಗಳನ್ನು ಜಿಲ್ಲಾ ಪಂಚಾಯತ್ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿದಲ್ಲಿ ಶೀಘ್ರದಲ್ಲಿ ದುರಸ್ತಿಗೆ ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಮೊಬೈಲ್ ಸಿಗ್ನಲ್‌ಗಳು ಸಿಗುತ್ತಿಲ್ಲ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಟವರ್‌ಗಳಿಗೆ ವಿದ್ಯುಚ್ಛಕ್ತಿ ಸರಬರಾಜಿನ ಕೊರತೆಯಿಂದಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮುಂದಾಗಬೇಕು.

ರಾಷ್ಟ್ರೀಯ ಹೆದ್ದಾರಿಯ ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಜಿಲ್ಲಾಡಳಿತದಿಂದ
ಗುರುತಿಸಲಾಗಿರುವ ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳು ಸುರಕ್ಷಿತವಾಗಿ ಚಾಲನೆ ಆಗುವಂತೆ ನೋಡಿಕೊಳ್ಳಬೇಕು. ಕಾಲ ಕಾಲಕ್ಕೆ ರಸ್ತೆ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.