ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಸಶಸ್ತೀಕರಣ, ಶಕ್ತಿ ಕೇಂದ್ರ ಪ್ರಮುಖರ ಸಭೆ ಹಾಗೂ ಮನೆ ಮನೆ ಭೇಟಿ ಅಭಿಯಾನ ನಡೆಯಲಿದೆ. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಂಘಟಿತ ಪ್ರಯತ್ನದ ಮೂಲಕ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗಳಲ್ಲಿ ಅ.11 ರಿಂದ 17ರ ವರೆಗೆ ರಾಷ್ಟ್ರ ಧ್ವಜವನ್ನು ಅರಳಿಸುವ ಮೂಲಕ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಗೌರವಿಸುವ ಕೇಂದ್ರ ಸರಕಾರದ ‘ಹರ್ ಘರ್ ತಿರಂಗಾ’ ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಕುಯಿಲಾಡಿ ವಿನಂತಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷವಾಗಿರುವ ಬಿಜೆಪಿ ಇಂದು ದೇಶದ ಎಲ್ಲ ಸ್ತರಗಳಲ್ಲಿ ಅಭಿವೃದ್ಧಿ ಪರ ಆಡಳಿತ ನಡೆಸುತ್ತಿದೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರ ಹಾಗೂ 150 ವಿಧಾನಸಭಾ ಕ್ಷೇತ್ರದ ಗೆಲುವಿನ ಗುರಿ ಹೊಂದಿರುವ ರಾಜ್ಯ ಬಿಜೆಪಿ ಸಂಘಟನಾತ್ಮಕವಾಗಿ 9 ವಿಭಾಗಗಳಡಿ ಪಕ್ಷದ ಪದಾಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಿದೆ. ಬೂತ್ ಸಶಸ್ತೀಕರಣ ಸಹಿತ ಪಕ್ಷದ ನಿಗದಿತ ಕಾರ್ಯ ಚಟುವಟಿಕೆಗಳನ್ನು ಬದ್ಧತೆಯಿಂದ ನಿರ್ವಹಿಸುವ ಜೊತೆಗೆ ಬೂತ್, ಮಂಡಲ ಮತ್ತು ಜಿಲ್ಲಾ ಸಮಾವೇಶದ ಮೂಲಕ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಶಕ್ತಿ ತುಂಬಿ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಕೈ ಜೋಡಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.