75 ನೇ ಸ್ವಾತಂತ್ರೋತ್ಸವ ದಿನಾಚರಣೆ: ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಈ ಬಾರಿಯ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸ್ವಾತ್ರಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಮ್ಮ ದೇಶದ 75 ನೇ ಸ್ವಾತ್ರಂತ್ರೋತ್ಸವ ಕಾರ್ಯಕ್ರಮವನ್ನು ಈ ಬಾರಿ ವಿಶೇಷವಾಗಿ ಆಚರಣೆ ಮಾಡಲಾಗುವುದು. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕ, ಎನ್.ಸಿ.ಸಿ ಸೇರಿದಂತೆ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ.

ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಮುಖಂಡರುಗಳಿಗೆ ಶಿಷ್ಠಾಚಾರದಂತೆ ಆಹ್ವಾನಿಸಲಾಗುವುದು ಎಂದ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.

ಈ ಬಾರಿ ಸ್ವಾತಂತ್ರೋತ್ಸವ ದಿನಾಚರಣೆಯ ಮುನ್ನಾ ದಿನಗಳಾದ ಆಗಸ್ಟ್ 13 ರಿಂದ 15 ರ ವರಗೆ ಪ್ರತಿಯೊಬ್ಬರ ಮನೆಯಲ್ಲಿಯೂ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡಿದ ಅವರು, ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.