ನಿನ್ನೆ ರಾತ್ರಿ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟ್ವೆಂಟಿ-20 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ಗೆ ಇಳಿದ ಪಾಕಿಸ್ತಾನ 19.5 ಓವರ್ ಗಳಲ್ಲಿ147 ರನ್ಗಳಿಗೆ ಆಲೌಟ್ ಆಯಿತು, ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ 43 ರನ್ಗಳು ತಂಡದ ಗರಿಷ್ಠ ಸ್ಕೋರ್ ಆಗಿದ್ದವು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮೂರು ಮತ್ತು ಅರ್ಷದೀಪ್ ಸಿಂಗ್ ಎರಡು ವಿಕೆಟ್ ಪಡೆದರು.
ಭಾರತ ತಂಡವು ಹಾರ್ದಿಕ್ ಪಾಂಡ್ಯ ಅವರ ಅಜೇಯ 33 ರನ್ಗಳ ನೆರವಿನಿಂದ 19.4 ಓವರ್ಗಳಲ್ಲಿ ಐದು ವಿಕೆಟ್ಗಳ ನಷ್ಟಕ್ಕೆ 148 ರನ್ ಗಳಿಸಿ ಪಂದ್ಯವನ್ನು ಗೆದ್ದಿತು. ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಇಬ್ಬರೂ ತಲಾ 35 ರನ್ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್ ನವಾಜ್ ಮೂರು ವಿಕೆಟ್ ಪಡೆದರು. ಬಾಲ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಪಂದ್ಯದ ಆಟಗಾರ ಎಂದು ಪ್ರಶಸ್ತಿ ಪಡೆದರು. ಇದಕ್ಕೂ ಮೊದಲು ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಭಾರತ ಇದುವರೆಗೆ ಏಳು ಬಾರಿ ಪ್ರಶಸ್ತಿ ಗೆದ್ದು ದಾಖಲೆ ಮಾಡಿದೆ. ಈ ಪಂದ್ಯ ವಿರಾಟ್ ಕೊಹ್ಲಿ ಅವರ 100ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಇದರೊಂದಿಗೆ ವಿರಾಟ್ ಕೊಹ್ಲಿ ಎಲ್ಲಾ ಮೂರು ಮಾದರಿಗಳಲ್ಲಿ 100 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.