ಪ.ಜಾತಿ/ಪ.ಪಂಗಡದ ಮೀಸಲಾತಿ ಏರಿಕೆಗೆ ರಾಜ್ಯ ಸರ್ಕಾರ ನಿರ್ಧಾರ: ಪ.ಜಾತಿಗೆ 17ಶೇ ಮತ್ತು ಪ.ಪಂಗಡಕ್ಕೆ 7ಶೇ ಏರಿಕೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಲಾಗಿದೆ.

ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.