ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳ ಒತ್ತುವರಿ ಕಾರ್ಯವನ್ನು ತೆರವುಗೊಳಿಸುವ ಕುರಿತು ಅದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಉಡುಪಿ ತಾಲೂಕು ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಉದ್ದೇಶದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ವಿವಿಧ ಪ್ರದೇಶದಲ್ಲಿ ಜಾಗಗಳನ್ನು ಕಾಯ್ದಿರಿಸಲಾಗಿದ್ದು, ಇಂತಹ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು, ಒತ್ತುವರಿ ಕಾರ್ಯದ ತೆರವು ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡಿ, ತೆರವುಗೊಂಡ ಜಾಗಗಳನ್ನು ಸಾರ್ವಜನಿಕ ಉದ್ದೇಶಗಳಿಗಾಗಿಯೇ ಬಳಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸುತ್ತಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಒದಗಿಸುವ ಜೊತೆಗೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಸಾರ್ವಜನಿಕರು ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಶಿರೂರು ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು, ಉಡುಪಿ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ನಡೆದ ಪ್ರಥಮ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಆರತಿ ಬೆಳಗಿ, ತಿಲಕವಿಟ್ಟು ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಗ್ರಾಮಸ್ಥರು ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಗ್ರಾಮದಲ್ಲಿ ಸರ್ಕಾರಿ ಜಮೀನಿನ ಒತ್ತುವರಿ, ರಸ್ತೆ ಸಂಪರ್ಕ, ಬಸ್ ಸೌಲಭ್ಯ, ಕಾಡು ಪ್ರಾಣಿಗಳ ಹಾವಳಿ, ಕಂದಾಯ ದಾಖಲೆಗಳಲ್ಲಿನ ತಿದ್ದುಪಡಿ, ಕಿಂಡಿ ಅಣೆಕಟ್ಟು ದುರಸ್ತಿ, 94ಸಿ ಹಕ್ಕುಪತ್ರ ಕುರಿತಂತೆ ಸುಮಾರು 40 ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು.
ಕೃಷಿ ಇಲಾಖೆಯ ವತಿಯಿಂದ ನೀಡುವ ಕಿಸಾನ್ ಸಮ್ಮಾನ್ ಯೋಜನೆ ಹಾಗೂ ಇತರೇ ಸವಲತ್ತುಗಳ ಪ್ರಯೋಜನ ಪಡೆಯುವಂತೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಆಹಾರ ಇಲಾಖೆ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯ ಜಾನುವಾರುಗಳಲ್ಲಿ ಇದುವರೆಗೆ ಚರ್ಮ ಗಂಟು ರೋಗದ ಲಕ್ಷಣಗಳು ಕಂಡು ಬಂದಿಲ್ಲವಾಗಿದ್ದು, ಈ ರೋಗವನ್ನು ಎದುರಿಸಲು ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ರೋಗಕ್ಕೆ ಸೂಕ್ತ ಔಷಧಗಳು ಕೂಡಾ ಲಭ್ಯವಿದ್ದು, ಜಾನುವಾರು ಕೊಟ್ಟಿಗೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಶಂಕರ ಶೆಟ್ಟಿ ಮಾಹಿತಿ ನೀಡಿದರು.
ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆ ವತಿಯಿಂದ ಆರೋಗ್ಯ ಶಿಬಿರ, ಕಾರ್ಮಿಕ ಇಲಾಖೆ ವತಿಯಿಂದ ಇ-ಶ್ರಮ್ ನೊಂದಣಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಿಯಾನಂದ ಹೆಗಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಆಹಾರ ಇಲಾಖೆ ಉಪ ನಿರ್ದೇಶಕ ಮೊಹಮದ್ ಇಸಾಕ್, ಡಿ.ಹೆಚ್.ಓ ಡಾ.ನಾಗಭೂಷಣ ಉಡುಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಉಡುಪಿ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.